ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಒಪ್ಪಲಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಈ ಹಂತದಲ್ಲಿ ಏಕೆ ಮಧ್ಯಪ್ರವೇಶಿಸಬೇಕೆಂದು ಪ್ರಶ್ನಿಸಿ ಮನವಿಯನ್ನು ನಿರಾಕರಿಸಿದೆ.
ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಬುಧವಾರ ವಿಶೇಷ ಪೀಠ ರಚನೆ ಮಾಡಿದೆ. ಈ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಇದ್ದಾರೆ.
ಇದನ್ನೂ ಓದಿ: ಹಿಜಾಬ್ ಪ್ರಕರಣ: ಸಿಜೆ ನೇತೃತ್ವದಲ್ಲಿ ವಿಶೇಷ ಪೀಠ ರಚನೆ, ಇಂದು ಮಧ್ಯಾಹ್ನವೇ ವಿಚಾರಣೆ
ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿರುದ್ಧ ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಹಲವು ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನಿನ್ನೆ ಹಾಗೂ ಮೊನ್ನೆ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು.