ನವದೆಹಲಿ: ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ. ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 12 ಅಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ರಾಷ್ಟ್ರೀಯ ವಿಪತ್ತು ಸಂತ್ರಸ್ತರಿಗೆ ಪರಿಹಾರವನ್ನು ಶಿಫಾರಸು ಮಾಡಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್‌ನ ಮೂವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ ತನ್ನ ತೀರ್ಪಿನಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 6 ವಾರಗಳೊಳಗೆ ಮಾರ್ಗಸೂಚಿಗಳನ್ನು ರೂಪಿಸಲು ತಿಳಿಸಿದೆ.
ಇದನ್ನೂ ಓದಿ: ಜು.31ರವರೆಗೆ 'ಒಂದು ದೇಶ ಒಂದು ಪಡಿತರ' ಯೋಜನೆ ಜಾರಿಗೊಳಿಸಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
NDMA ಸೆಕ್ಷನ್ 12 ಕಡ್ಡಾಯ ನಿಬಂಧನೆಯಲ್ಲ ಎಂಬ ಕೇಂದ್ರ ಸರ್ಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ವಿಚಾರಣೆ ವೇಳೆ, ಸೆಕ್ಷನ್ 12ರ 'shall' ಪದ ಬಳಕೆ ಇದ್ದು ನಿಬಂಧನೆ ಕಡ್ಡಾಯವಾಗಿದೆ ಎಂದು ಹೇಳಿದೆ. ಆದರೆ, ಒಂದು ನಿರ್ದಿಷ್ಟ ಮೊತ್ತವನ್ನು ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಗಳಲ್ಲಿ, ಕೇಂದ್ರ ಮತ್ತು ರಾಜ್ಯಗಳು ಕೊರೊನಾಗೆ ಬಲಿಯಾದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶಿಸಲು ಕೋರಲಾಗಿತ್ತು. ಅಲ್ಲದೇ ಕೊರೊನಾದಿಂದ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಮರಣ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಬಗ್ಗೆಯೂ ಅರ್ಜಿದಾರರು ಮನವಿ ಮಾಡಿದ್ದರು.