ನವದೆಹಲಿ: ಜುಲೈ 31ವರೆಗೆ ಒಂದು ದೇಶ ಒಂದು ಪಡಿತರ ಯೋಜನೆಯನ್ನು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುಂದುವರಿಸಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕೋವಿಡ್-19 ಪರಿಸ್ಥಿತಿ ಇರುವವರೆಗೆ ವಲಸೆ ಕಾರ್ಮಿಕರಿಗೆ ಉಚಿತ ಒಣ ಪಡಿತರವನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾ.ಎಂ.ಆರ್.ಶಾ ಅವರಿದ್ದ ದ್ವಿಸದಸ್ಯ ಪೀಠ, ಆಹಾರ ಭದ್ರತೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಜುಲೈ 31 ರೊಳಗೆ ಅಸಂಘಟಿತ ವಲಯದ ಕಾರ್ಮಿಕರು ಯೋಜನೆಗಳ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ಸಹಾಯದಿಂದ ಪೋರ್ಟಲ್ ಅಭಿವೃದ್ಧಿಪಡಿಸಬೇಕೆಂದು ಕೇಂದ್ರಕ್ಕೆ ನಿರ್ದೇಶನ ನೀಡಿತು.
ವಲಸೆ ಕಾರ್ಮಿಕರಿಗಾಗಿ ಈಗಾಗಲೇ ನಡೆಯುತ್ತಿರುವ ಕಮ್ಯೂನಿಟಿ ಕಿಚನ್‌ಗಳನ್ನು ಮಹಾಮಾರಿ ಕೋವಿಡ್ ಕಡಿಮೆಯಾಗುವವರಿಗೆ ಮುಂದುವರಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: ಭಾರತಕ್ಕೆ 41 ಮಿಲಿಯನ್ ಡಾಲರ್ ಹೆಚ್ಚುವರಿ ಹಣಕಾಸು ನೆರವು ನೀಡಿದ ಅಮೆರಿಕ
ಕೋವಿಡ್ ಸಂಕಷ್ಟದ ಸ್ಥಿತಿ ಇರುವವರೆಗೂ ವಲಸೆ ಕಾರ್ಮಿಕರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಪೂರೈಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಸಾಮಾಜಿಕ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್, ಹರ್ಷ್ ಮಂದರ್ ಮತ್ತು ಜಗದೀಪ್ ಚೋಕರ್ ಅವರು ವಲಸೆ ಕಾರ್ಮಿಕರ ಕಲ್ಯಾಣ ಕ್ರಮಗಳನ್ನು ಜಾರಿಗೆ ತರಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.