ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು, "ಈ ಆದೇಶವು ಮಧ್ಯಂತರ ಸ್ವರೂಪದ್ದಾಗಿರುವುದರಿಂದ, ನಾವು ಅದರಲ್ಲಿ ಹಸ್ತಕ್ಷೇಪ ಮಾಡಲು ಒಲವು ತೋರುವುದಿಲ್ಲ ಎಂದು ಹೇಳಿದೆ.
ಜೂನ್ 12, 2023 ರಂದು ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದೆ. "ಆದಾಗ್ಯೂ, ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ ಅರ್ಜಿ ಮತ್ತು ತನ್ನ ಮುಂದೆ ಬಾಕಿ ಇರುವ ಮೇಲ್ಮನವಿಯನ್ನು ಹೈಕೋರ್ಟ್ ಆದಷ್ಟು ಬೇಗ ಹಾಗೂ ಎರಡು ವಾರಗಳಲ್ಲಿ ಆಲಿಸಿ ವಿಲೇವಾರಿ ಮಾಡಬೇಕು ಎಂದು ಪೀಠ ಕೋರಿದೆ.
2019ರ ಸೆಪ್ಟೆಂಬರ್ 25ರಂದು ಅಂದಿನ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ನ ಏಕಸದಸ್ಯ ಪೀಠವು ಏಪ್ರಿಲ್ 2023 ರಲ್ಲಿ ಅವರ ಮನವಿಯನ್ನು ವಜಾಗೊಳಿಸಿತ್ತು. ಹೆಚ್ಎಎಲ್ ಉದ್ಯೋಗಿ ಶಶಿಕುಮಾರ್ ಶಿವಣ್ಣ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸಮನ್ವಯ ಪೀಠದ ಆದೇಶವು ತನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಶಿವಕುಮಾರ್ ಮೇಲ್ಮನವಿಯಲ್ಲಿ ವಾದಿಸಿದ್ದರು.
ಶಿವಕುಮಾರ್ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ ಏಪ್ರಿಲ್ 1, 2013 ರಿಂದ ಏಪ್ರಿಲ್ 30, 2018 ರವರೆಗೆ 74.93 ಕೋಟಿ ರೂ.ಗಳ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಹೈಕೋರ್ಟ್‌ನ ವಿಭಾಗೀಯ ಪೀಠವು ತನ್ನ ಜೂನ್ 12, 2023ರ ಮಧ್ಯಂತರ ಆದೇಶದಿಂದ ಮೇಲ್ಮನವಿದಾರರನ್ನು ರಕ್ಷಿಸದಿದ್ದರೆ, ಅವರಿಗೆ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ. ಮತ್ತೊಂದೆಡೆ, ಪ್ರತಿವಾದಿಗಳಿಗೆ ಯಾವುದೇ ಪೂರ್ವಾಗ್ರಹ ಉಂಟಾಗುವುದಿಲ್ಲ ಎಂಬ ಶಿವಕುಮಾರ್ ಅವರ ವಕೀಲರ ವಾದವನ್ನು ಪೀಠ ಗಮನಿಸಿದೆ.
ಶಿವಕುಮಾರ್ ಅವರು ಮಧ್ಯಂತರ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಭಾಗೀಯ ಪೀಠ ಹೇಳಿದೆ. "ಅದರಂತೆ, ಪ್ರತಿವಾದಿ ಸಂಖ್ಯೆ 2 ಹೊರಡಿಸಿದ ಸೆಪ್ಟೆಂಬರ್ 25, 2019ರ ಸರ್ಕಾರಿ ಆದೇಶಕ್ಕೆ ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ತಡೆ ಇರುತ್ತದೆ" ಎಂದು ನ್ಯಾಯಪೀಠ ಹೇಳಿದೆ.
2017ರ ಆಗಸ್ಟ್‌ನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಆಧಾರದ ಮೇಲೆ ಸಿಬಿಐ 2020ರ ಅಕ್ಟೋಬರ್‌ನಲ್ಲಿ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿತ್ತು.
ಇದನ್ನೂ ಓದಿ: ತೆಲಂಗಾಣ ಚುನಾವಣಾ ಕಣದಲ್ಲಿ ಕೋಟ್ಯಾಧೀಶರು; ಕಾಂಗ್ರೆಸ್ ರಾಜ್ಯಾಧ್ಯಕ್ಷರ ವಿರುದ್ಧ 89 ಕೇಸ್!