ನವದೆಹಲಿ: ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಂದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಸುಪ್ರೀಂ ಕೋರ್ಟ್ ತೆಗೆದುಹಾಕಿದೆ. ಪ್ರಕರಣದಲ್ಲಿ ಬಾಕಿ ಉಳಿದಿರುವ ವಿಚಾರಣೆಯನ್ನು ಮತ್ತೊಬ್ಬ ನ್ಯಾಯಮೂರ್ತಿಗೆ ಮರು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಮೂರ್ತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಹೊಸ ನ್ಯಾಯಾಮೂರ್ತಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಪರಿಗಣಿಸಲು ಮುಕ್ತವಾಗಿರುತ್ತಾರೆ ಎಂದು ಹೇಳಿದೆ.
ಅಭಿಜಿತ್ ಗಂಗೋಪಾಧ್ಯಾಯ ಅವರ ನಿಷ್ಪಕ್ಷಪಾತತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬ್ಯಾನರ್ಜಿ: ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಗೆ ನಿರ್ದೇಶನ ನೀಡಿದ ಕಲ್ಕತ್ತಾ ಹೈಕೋರ್ಟ್‌ನ ಇತ್ತೀಚಿನ ಆದೇಶದ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಿದ ನಂತರ ಈ ತೀರ್ಪು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಬ್ಯಾನರ್ಜಿ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ನಿಷ್ಪಕ್ಷಪಾತತೆ ಬಗ್ಗೆ ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು.
ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನವೊಂದರಲ್ಲಿ ಬ್ಯಾನರ್ಜಿ ವಿರುದ್ಧ ನೀಡಿದ ಹೇಳಿಕೆಗಳು ಅವರ ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ಸೂಚಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ರಾಜಕೀಯವಾಗಿ ಸೂಕ್ಷ್ಮ ಪ್ರಕರಣದಲ್ಲಿ ಕೇಂದ್ರೀಯ ಸಂಸ್ಥೆಗಳು ಭಾಗಿಯಾಗಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆಯ ನ್ಯಾಯಸಮ್ಮತತೆ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಮತ್ತೊಬ್ಬ ನ್ಯಾಯಾಮೂರ್ತಿಗೆ ಮರು ನಿಯೋಜಿಸಿರುವ ಸುಪ್ರೀಂ ಕೋರ್ಟ್‌ನ ನಿರ್ಧಾರವು ವಿಚಾರಣೆಯಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಮಹತ್ವದ ಹೆಜ್ಜೆಯಾಗಿದೆ.
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಪ್ರಮುಖ ಭ್ರಷ್ಟಾಚಾರ ಪ್ರಕರಣ: ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣವು ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಪ್ರಮುಖ ಭ್ರಷ್ಟಾಚಾರ ಪ್ರಕರಣವಾಗಿದೆ. ಕೆಲವು ರಾಜಕಾರಣಿಗಳು ಸೇರಿದಂತೆ ಹಲವಾರು ಪ್ರಭಾವಿ ವ್ಯಕ್ತಿಗಳು ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖೆಯಲ್ಲಿ ಪ್ರಮುಖವಾಗಿ ಅಭಿಷೇಕ್ ಬ್ಯಾನರ್ಜಿ ಹೆಸರು ಕೇಳಿ ಬಂದಿದ್ದು, ಗಂಗೋಪಾಧ್ಯಾಯ ಅವರು ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದ್ದರು, ಈ ಸಂಬಂಧ ಇಡಿ ಅಭಿಷೇಕ್ ಬ್ಯಾನರ್ಜಿಯನ್ನು ವಿಚಾರಣೆಗೆ ಒಳಪಡಿಸಿತ್ತು.
ಇದನ್ನೂ ಓದಿ:ಬಂಗಾಳದ ಪೊಲೀಸರು ಬುಡಕಟ್ಟು ಯುವಕನನ್ನು ಕೊಂದಿದ್ದಾರೆ: ಸುವೆಂದು ಅಧಿಕಾರಿ ಆರೋಪ