ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು, ನಾಲ್ಕು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಸುತ್ತಿನ ಹೈಕಮಾಂಡ್ ಮಟ್ಟದ ಮಾತುಕತೆಗಳ ನಂತರವೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನಡುವೆ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ನಡೆಸಲು ಅವಕಾಶ ನೀಡುವಂತೆ ಕೋರಿ ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಜುಲೈಗೆ ಮುಂದೂಡಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ 2020ರ ಅಕ್ಟೋಬರ್ 3 ರಂದು ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಲಾಗಿತ್ತು. 2013 ರಿಂದ 2018 ರವರೆಗೆ ಕಾಂಗ್ರೆಸ್ ನಾಯಕನ ಸಂಪತ್ತು ಅಸಮಾನ ರೀತಿಯಲ್ಲಿ ಹೆಚ್ಚಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.
ಡಿಕೆಶಿಗೆ ಸಂಕಷ್ಟ?: ಡಿ.ಕೆ. ಶಿವಕುಮಾರ್ ಅವರ ಒಟ್ಟು ಆಸ್ತಿ ಮೌಲ್ಯ ಅಂದಾಜು 1,400 ಕೋಟಿ ರೂಪಾಯಿ. ಇವರು ಕರ್ನಾಟಕದ ಶ್ರೀಮಂತ ರಾಜಕಾರಣಿ ಕೂಡಾ. ಇವರ ವಿರುದ್ಧ ಈಗಾಗಲೇ ಇಡಿ ಮತ್ತು ಸಿಬಿಐ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣಗಳನ್ನು ದಾಖಲಿಸಿಕೊಂಡಿವೆ. ಕಾಂಗ್ರೆಸ್ ಡಿಕೆಶಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಮತ್ತು ಅಕ್ರಮ ಆಸ್ತಿ/ಅಕ್ರಮ ಹಣ ವರ್ಗಾವಣೆ ಪ್ರಕರಣ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ರಾಜಕೀಯ ಅಸ್ಥಿರತೆ ಉಂಟಾಗುವುದನ್ನು ಬಯಸುವುದಿಲ್ಲ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಕೇಂದ್ರೀಯ ತನಿಖಾ ಸಂಸ್ಥೆಗಳು ತಮ್ಮ ತನಿಖಾ ಕಾರ್ಯವನ್ನು ಚುರುಕುಗೊಳಿಸಬಹುದು ಎಂಬ ಭಯ ಕೂಡಾ ಕಾಂಗ್ರೆಸ್ ಪಾಳಯದಲ್ಲಿದೆ.
ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಜೊತೆ ಖರ್ಗೆ ಚರ್ಚೆ; ನಾಳೆ ನೂತನ ಸಿಎಂ ಘೋಷಣೆ ಸಾಧ್ಯತೆ..