ನವದೆಹಲಿ: ಅಲ್ಪಾವಧಿಗೆ ಯುವಕರನ್ನು ಸೇನೆಗೆ ಸೇರಿಸಿಕೊಳ್ಳುವ ಮಹತ್ವಾಕಾಂಕ್ಷಿ ಅಗ್ನಿಪಥ್ ಯೋಜನೆಯ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಜುಲೈ 15 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿವಿಧ ಅರ್ಜಿಗಳು ಸಲ್ಲಿಕೆಯಾಗಿವೆ. ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು. ಅಗ್ನಿಪಥ್ ಯೋಜನೆ ಮರುಪರಿಶೀಲಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ಈಗ ನಡೆಯಲಿದೆ.
ವಕೀಲ ಹರ್ಷ್ ಅಜಯ್ ಸಿಂಗ್ ಅವರು ಅಗ್ನಿಪಥ್ ಯೋಜನೆ ವಿರುದ್ಧ ಪಿಐಎಲ್ ಸಲ್ಲಿಸಿದ್ದು, ಅಗ್ನಿಪಥ್ ಯೋಜನೆ, ರಾಷ್ಟ್ರೀಯ ಭದ್ರತೆ ಮತ್ತು ಸೇನೆಯ ಮೇಲೆ ಅದರಿಂದಾಗುವ ಪರಿಣಾಮದ ಕುರಿತು ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಮತ್ತೊಂದು ಪಿಐಎಲ್‌ನಲ್ಲಿ ವಕೀಲ ಎಂ.ಎಲ್.ಶರ್ಮಾ ಅವರು, ‘ಅಗ್ನಿಪಥ’ ಯೋಜನೆಯ ಮೂಲಕ ಶತಮಾನದಷ್ಟು ಹಳೆಯದಾದ ಸೇನಾ ನೇಮಕಾತಿ ಕ್ರಮವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಸಂಸತ್ತಿನ ಅನುಮೋದನೆ ಇಲ್ಲದ ಈ ಕ್ರಮ ಸಂವಿಧಾನಬಾಹಿರ’ ಎಂದು ಸುಪ್ರೀಂನಲ್ಲಿ ವಾದಿಸಿದ್ದರು. ಈ ಬಗ್ಗೆ 15 ರಂದು ವಿಚಾರಣೆ ಆರಂಭವಾಗಲಿದೆ.
ಓದಿ: ಹಿಜಾಬ್: ಕರ್ನಾಟಕ ಹೈಕೋರ್ಟ್ ತೀರ್ಪು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ