ಲಖಿಂಪುರ್ ಖೇರಿ(ಉತ್ತರ ಪ್ರದೇಶ): ಲಖಿಂಪುರ್ ಖೇರಿ ಗಲಭೆಯಲ್ಲಿ 8 ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಎಸ್ಪಿ ಅರುಣ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ .
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ತನ್ನ ಕಾರನ್ನು ಚಲಾಯಿಸಿರುವ ಆರೋಪ ಕೇಳಿಬಂದಿದೆ. ಪರಿಣಾಮ ಹೋರಾಟಗಾರರು ಮೂರು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಯುಪಿಯ ಲಖಿಂಪುರ್ ಖೇರಿಯಲ್ಲಿ ಇಂದು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ಯುಪಿ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿ ನೀಡಬೇಕಿತ್ತು. ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು. ಅವರು ಉಪ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಲು ಅಳವಡಿಸಿದ್ದ ಹೋರ್ಡಿಂಗ್‌ಗಳನ್ನು ಮುರಿದು ಟಿಕೊನಿಯಾದಲ್ಲಿ ಸಿದ್ಧಪಡಿಸಿದ ಹೆಲಿಪ್ಯಾಡ್ ಅನ್ನು ವಶಪಡಿಸಿಕೊಂಡರು.
ನಗರದಲ್ಲಿ ನಡೆದ ಸಭೆಯಲ್ಲಿ ಅಜಯ್ ಮಿಶ್ರಾ ಅವರು ರೈತರು ವಿರುದ್ಧ ಹೇಳಿಕೆ ನೀಡಿದ್ದರು. ಪ್ರತಿಭಟನೆ ನಡೆಸುತ್ತಿರುವವರು ಪಾಲಿಯಾವನ್ನು ಬಿಡುವುದು ಮಾತ್ರವಲ್ಲದೆ ಜಿಲ್ಲೆಯನ್ನು ತೊರೆಯಬೇಕು ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ, ಬಿಜೆಪಿ ನಾಯಕರು ಕಾರಿನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಅಥವಾ ಅದರಿಂದ ಕೆಳಗಿಳಿಯಲೂ ಸಾಧ್ಯವಾಗುವುದಿಲ್ಲ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಗಾಜಿಪುರ ಗಡಿ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಾಜ್ವಾ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ರೈತರಿಗೆ ಮನವಿ ಮಾಡಿದ್ದಾರೆ.
ರೈತರು ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಘಟನೆಯ ಕುರಿತು ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕಾಗಿ ಕಾಯಬೇಕು. ಅವರ ಭವಿಷ್ಯದ ಕಾರ್ಯತಂತ್ರವನ್ನು ಒಕ್ಕೂಟವು ತಿಳಿಸುತ್ತದೆ. ಶಾಂತಿಯನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದಿದ್ದಾರೆ.
ಈ ನಡುವೆ ರೈತ ನಾಯಕ ರಾಕೇಶ್ ಟಿಕಾಯತ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ನಾನು ಲಖಿಂಪುರ್ ಖೇರಿಗೆ ಹೊರಡುತ್ತಿದ್ದೇನೆ ಎಂದು ಹೇಳಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.