ಪ್ರಯಾಗರಾಜ್ (ಉತ್ತರ ಪ್ರದೇಶ): 15 ವರ್ಷ ಅಥವಾ 15 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ 375ನೇ ಸೆಕ್ಷನ್ಗೆ ಸಂಬಂಧಿಸಿದಂತೆ ಈ ತೀರ್ಪು ಹೊರಬಿದ್ದಿದೆ.
ಮೊರದಾಬಾದ್ನ ಖುಷಾಬೆ ಅಲಿ ಎಂಬಾತನ ಜಾಮೀನು ಅರ್ಜಿ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶ ಮೊಹಮದ್ ಅಸ್ಲಂ ಈ ರೀತಿಯ ತೀರ್ಪು ನೀಡಿದರು. ಅಪ್ರಾಪ್ತ ಪತ್ನಿಗೆ ವರದಕ್ಷಿಣೆ ಕಿರುಕುಳ ಮತ್ತು ನೈಸರ್ಗಿಕವಲ್ಲದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದಲ್ಲಿ ಖುಷಾಬೆ ಅಲಿ ವಿರುದ್ಧ ದೂರು ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ಪ್ರಕಾರ ಒಬ್ಬ ವ್ಯಕ್ತಿ ತನ್ನ ಪತ್ನಿ 15 ವರ್ಷ ಅಥವಾ 15 ವರ್ಷಕ್ಕಿಂತ ಮೇಲ್ಪಟ್ಟವಳಾಗಿದ್ದರೆ, ಆಕೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಾಚಾರವಲ್ಲ ಎಂದು ಅಭಿಪ್ರಾಯಪಟ್ಟಿತು.
1860ರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375, 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗವನ್ನು ಹೊರತುಪಡಿಸಿ, ಉಳಿದ ಎಲ್ಲಾ ಮಹಿಳೆಯರೊಂದಿಗೆ ಒಪ್ಪಿತವಲ್ಲದ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸುತ್ತದೆ.
ಅಪರಾಧ ಕಾನೂನುಗಳ ತಿದ್ದುಪಡಿ ಕಾಯ್ದೆಯನ್ನು 2013ರ ಜಾರಿಗೆ ತಂದಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375ಕ್ಕೆ ಸ್ವಲ್ಪ ಮಟ್ಟಿಗಿನ ತಿದ್ದುಪಡಿ ಮಾಡಿ 18 ವರ್ಷ ಅಥವಾ 18 ವರ್ಷ ಮೇಲ್ಪಟ್ಟ ಮಹಿಳೆಯೊಂದಿಗೆ ಒಪ್ಪಿತವಲ್ಲದ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಯಿತು.
ಆದರೆ, ಇಲ್ಲಿಯೂ ಕೂಡಾ 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗವನ್ನು ಹೊರತುಪಡಿಸಿ ಎಂದೇ ಉಲ್ಲೇಖಿಸಲಾಗಿದ್ದು, ಈ ಕಾನೂನಿನಲ್ಲಿ ಯಾವುದೇ ಬದಲಾವಣೆ ತಂದಿರಲಿಲ್ಲ. ಹಾಗಾಗಿ ಇದೇ ಸೆಕ್ಷನ್ ಅಡಿಯಲ್ಲಿ ಆರೋಪಿಗೆ ಜಾಮೀನು ನೀಡಲಾಗಿದೆ. ಆದರೂ 2017ರಲ್ಲಿ ಸುಪ್ರೀಂಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಲೈಂಗಿಕ ಸಂಭೋಗವು ಅತ್ಯಾಚಾರ ಎಂದು ಹೇಳಿದೆ.
ಇನ್ನು ಸೆಪ್ಟೆಂಬರ್ 8 2020ರಂದು, ವರದಕ್ಷಿಣೆ ಕಿರುಕುಳ, ಹಲ್ಲೆ ಮತ್ತು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕಾಗಿ ಮೊರಾದಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆಯಲ್ಲಿ ಖುಷಾಬೆ ಅಲಿ ವಿರುದ್ಧ ದೂರು ದಾಖಲಾಗಿತ್ತು.
ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಮಹಿಳೆಯ ಗುಪ್ತಾಂಗಕ್ಕೆ ಖಾರದ ಪುಡಿ ಸುರಿದ ದುಷ್ಕರ್ಮಿಗಳು!