ನವದೆಹಲಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಒಂದೂವರೆ ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದರು.
ಆ ಬಳಿಕ ಹೊರಬಂದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾರಿನಲ್ಲಿ ತೆರಳಿದರು. ಇದಕ್ಕೂ ಮುನ್ನ ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದರು.
ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಏರಿಳಿತಗಳು ಕಾಣಿಸಿಕೊಳ್ಳುತ್ತಿವೆ. ಪಂಜಾಬ್, ಛತ್ತೀಸ್ಗಢ, ಕೇರಳ ಕಾಂಗ್ರೆಸ್ನಲ್ಲಿ ಸ್ವಲ್ಪಮಟ್ಟದ ಅಸಮಾಧಾನಗಳು ಕಾಣಿಸಿಕೊಂಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.
ಇದಷ್ಟೇ ಅಲ್ಲದೇ ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಸೋನಿಯಾ ಗಾಂಧಿಯವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿರಬಹುದು ಎನ್ನಲಾಗಿದೆ.
ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸಿದ ಪ್ರಕರಣ: ವಿಡಿಯೋ ಹಂಚಿಕೊಂಡ ಪ್ರಿಯಾಂಕಾ ಗಾಂಧಿ