ಬಾಲಂಗೀರ್ (ಒಡಿಶಾ): ಒಂದೇ ಕುಟುಂಬದ ಆರು ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬಾಲಂಗೀರ್ ಜಿಲ್ಲೆಯ ಪಟ್ನಾಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಸನ್ರಪದ ಗ್ರಾಮದಲ್ಲಿ ನಡೆದಿದೆ.
ಮನೆಯ ಒಳಗಿನಿಂದ ಬಾಗಿಲು ಹಾಕಿಕೊಂಡಿರುವುದನ್ನು ಕಂಡು ನೆರೆಹೊರೆಯವರು ಗಮನಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತದೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.
ಮೃತರನ್ನು ಬುಲು ಜೆನಾ, ಆತನ ಪತ್ನಿ, ಓರ್ವ ಪುತ್ರಿ ಸೇರಿದಂತೆ ನಾಲ್ವರು ಮಕ್ಕಳು ಎಂದು ಗುರ್ತಿಸಲಾಗಿದೆ. ಈ ಕುಟುಂಬವು ಸುಮಾರು 10 ವರ್ಷಗಳಿಂದ ಜೇನು ಸಂಗ್ರಹಿಸಿ, ಅಕ್ಕಪಕ್ಕದ ಹಳ್ಳಿಗಳಲ್ಲಿ ಮಾರಾಟ ಮಾಡಿ ಜೀವನ ಸಾಗಿಸುತ್ತಿತ್ತು.
ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದು, ಮಂಗಳವಾರ ರಾತ್ರಿ ಜಗಳ ನಡೆದಿತ್ತು. ಇದು ಕೊಲೆಯೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ಸತ್ಯ ಹೊರಬರಲಿದೆ, ತನಿಖೆಗಾಗಿ ವಿಶೇಷ ತಂಡ ರಚಿಸಲಾಗುತ್ತದೆ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ.