ಜಮ್ಮು: ಕಣಿವೆ ನಾಡು ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಪ್ರಾಪ್ತ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ಘಟನೆ ನಡೆಯುತ್ತಿದ್ದಂತೆ ಎನ್ಜಿಒ ಸ್ವಯಂ ಸೇವಕರ ಸಂಘವೊಂದು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದು, ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೃತರನ್ನ ದಾನಿ ರಾಮ್, ಚಂದ್ರ ರೇಖಾ, ಅಜಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.