ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಕಂಡು ತೀವ್ರ ಮುಖಭಂಗಕ್ಕೊಳಗಾಗಿದೆ. ಇದರ ಆತ್ಮಾವಲೋಕನಕ್ಕಾಗಿ ನಾಳೆ ಕಾರ್ಯಕಾರಿ ಸಮಿತಿ ಸಭೆ(CWC) ನಡೆಯಲಿದೆ. ಈ ವೇಳೆ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಸುದ್ದಿಸಂಸ್ಥೆವೊಂದು ವರದಿ ಮಾಡಿದೆ. ಆದರೆ, ಈ ಸುದ್ದಿಯನ್ನ ಕಾಂಗ್ರೆಸ್ ಸಂಪೂರ್ಣವಾಗಿ ಅಲ್ಲಗಳೆದಿದೆ ಎನ್ನಲಾಗ್ತಿದೆ.
ವರದಿ ಅಲ್ಲಗಳೆದ ಕಾಂಗ್ರೆಸ್: ಸೋನಿಯಾ ಗಾಂಧಿ ಸೇರಿದಂತೆ ಗಾಂಧಿ ಕುಟುಂಬ ರಾಜೀನಾಮೆ ನೀಡುವ ಸುದ್ದಿ ಅಲ್ಲಗಳೆದಿರುವ ಕಾಂಗ್ರೆಸ್ ಇದರಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದಿದೆ. ಆದರೆ, ಸೆಪ್ಟಂಬರ್ ತಿಂಗಳಲ್ಲಿ ನಡೆಸಬೇಕಾಗಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆ ಅದಕ್ಕಿಂತಲೂ ಮುಂಚಿತವಾಗಿ ನಡೆಸುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋತು ತೀವ್ರ ಮುಜುಗರಕ್ಕೊಳಗಾಗಿದ್ದ ಸಂದರ್ಭದಲ್ಲೇ ಸೋನಿಯಾ ಗಾಂಧಿ ಹಾಗೂ ರಾಹುಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ಈ ವೇಳೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರ ಮನವೊಲಿಸುವ ಕೆಲಸ ನಡೆದಿತ್ತು. ಆದರೆ, 2019ರಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ದಿಢೀರ್ ಆಗಿ ರಾಜೀನಾಮೆ ನೀಡಿದ್ದರು. ಈ ವೇಳೆ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾಗಿದ್ದರು.
ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಸೋತು ಸುಣ್ಣವಾದ ಕಾಂಗ್ರೆಸ್.. ನಾಳೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ
ಇದೀಗ ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಪಕ್ಷ ಹೀನಾಯವಾಗಿ ಸೋತು ಮತ್ತಷ್ಟು ಮುಖಭಂಗಕ್ಕೊಳಗಾಗಿದೆ. ಇದರ ಬೆನ್ನಲ್ಲೇ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ, ಉತ್ತರ ಪ್ರದೇಶ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಹೊತ್ತಿದ್ದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿತ್ತು.
ಪಕ್ಷದ ಹಿರಿಯ ನಾಯಕ ಎ ಕೆ ಆ್ಯಂಟನಿ ನೇತೃತ್ವದಲ್ಲಿ ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಇದರಲ್ಲಿ ಸೋನಿಯಾ, ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಸೇರಿ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ.
ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು ಕಾಣುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಗಾಂಧಿ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಶಶಿ ತರೂರ್ ಸರಣಿ ಟ್ವೀಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆಯೇ ಕಾಂಗ್ರೆಸ್ ಪಕ್ಷದ ಭಿನ್ನಮತೀಯ ನಾಯಕರು ಸಭೆ ನಡೆಸಿದ್ದರು.