ಬಾಗಪತ್ (ಉತ್ತರಪ್ರದೇಶ): ಮನೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಬಾಗಪತ್-ಮೀರತ್ ಹೆದ್ದಾರಿಯಲ್ಲಿ ನಡೆದಿದೆ. ಎರಡೂ ಕಡೆಯವರು ಕೈಯಲ್ಲಿ ದೊಣ್ಣೆ, ಮಾರಕಾಸ್ತ್ರ ಹಿಡಿದು ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಾರಿನ ಗಾಜು ಪುಡಿಪುಡಿಯಾಗಿದೆ.
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಗಲಭೆ ಹತೋಟಿಗೆ ತಂದಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಘಟನೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಪೊಲೀಸರು 10 ಜನರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ. ಗಲಾಟೆಯ ದೃಶ್ಯ ಸಿಸಿಟಿವಿಯಲ್ಲಿ ಲಭ್ಯವಾಗಿದ್ದು, ಭಾಗಿಯಾಗಿದ್ದ ಮತ್ತಷ್ಟು ಜನರನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕ್ರೂರಾತಿಕ್ರೂರ.. ಮೊಬೈಲ್ ಕಳ್ಳತನ ಮಾಡಲು ವ್ಯಕ್ತಿಯನ್ನು ರಸ್ತೆಯಲ್ಲಿ ಎಳೆದೊಯ್ದರು..!