ಗುವಾಹಟಿ: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ರ್‍ಯಾಗಿಂಗ್‌ನಿಂದ ತಪ್ಪಿಸಿಕೊಳ್ಳಲು ಎರಡು ಅಂತಸ್ತಿನ ಕಟ್ಟಡದಿಂದ ಜಿಗಿದು ತೀವ್ರವಾಗಿ ಗಾಯಗೊಂಡಿದ್ದಾನೆ. ಕಟ್ಟಡದಿಂದ ಕೆಳಗೆ ಜಿಗಿದ ವಿದ್ಯಾರ್ಥಿಯನ್ನು ಆನಂದ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತನನ್ನು ದಿಬ್ರುಗಢದ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆನಂದ್ ಮತ್ತು ಇತರ ಇಬ್ಬರು ವಿದ್ಯಾರ್ಥಿಗಳಿಗೆ ಕಾಲೇಜಿನ ಸೀನಿಯರ್ಸ್ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ವಿದ್ಯಾರ್ಥಿಯು ಓಡಿಹೋಗಿ ಕಟ್ಟಡದಿಂದ ಜಿಗಿದಿದ್ದಾನೆ. ವಿಶ್ವವಿದ್ಯಾನಿಲಯದ ಅಧಿಕಾರಿಗಳು ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ ಹಲವಾರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಈ ಮಧ್ಯೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಆನಂದ್‌ಗೆ ನ್ಯಾಯ ಕೋರಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ದಿಬ್ರುಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೊಬ್ಬ ರ್‍ಯಾಗಿಂಗ್ ಪ್ರಕರಣದಲ್ಲಿ ಗಾಯಗೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ ಮತ್ತು ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿದ್ದು, ಗಾಯಾಳುವಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ. ರ್‍ಯಾಗಿಂಗ್ ಬೇಡ ಎಂದು ಟ್ವೀಟ್ ಮಾಡಿದ್ದಾರೆ.
ಸಂತ್ರಸ್ತನ ತಾಯಿ ಸರಿತಾ ಅವರ ಪ್ರಕಾರ, ರ್‍ಯಾಗಿಂಗ್‌ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಆನಂದ್‌ಗೆ ಚಿತ್ರಹಿಂಸೆ ನೀಡಿ ಕೊಲ್ಲಲು ಪ್ರಯತ್ನಿಸಿದರು. ಕಳೆದ ನಾಲ್ಕು ತಿಂಗಳಿಂದ ಆತನಿಗೆ ರ್ಯಾಗಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಸೀನಿಯರ್ಸ್ ಬಾಡಿ ಮಸಾಜ್ ಮಾಡಲು ಕಿರುಕುಳ ನೀಡುತ್ತಿದ್ದರು: ದ್ಯುತಿ ಚಾಂದ್