ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಪ್ರತಿಷ್ಠಿತ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿಯೊಬ್ಬ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ರೈಲು ಡಿಕ್ಕಿಯಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಲೋಹಿಯಾ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ತಡರಾತ್ರಿ ಕಮಾಂಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಆತನ ಚಿಕಿತ್ಸೆ ನಡೆಯುತ್ತಿದೆ. ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳದ ಬಳಿ ವಿದ್ಯಾರ್ಥಿಯ ಸ್ಕೂಲ್ ಬ್ಯಾಗ್ ಮತ್ತು ಪತ್ರ ಪತ್ತೆಯಾಗಿದೆ. ಪತ್ರದಲ್ಲಿ, ತನ್ನ ತರಗತಿ ಶಿಕ್ಷಕರನ್ನು ಉದ್ದೇಶಿಸಿ ಯಾವುದೋ ತಪ್ಪಿಗಾಗಿ ಕ್ಷಮೆಯಾಚಿಸಿದ್ದಾನೆ.
ಈ ಕುರಿತು ಮಾಹಿತಿ ನೀಡಿದ ಗೋಮತಿನಗರ ಇನ್‌ಸ್ಪೆಕ್ಟರ್, ತಡ ಸಂಜೆ ರೈಲ್ವೇ ಹಳಿ ಬಳಿ ವಿದ್ಯಾರ್ಥಿಯೊಬ್ಬ ಗಾಯಗೊಂಡು ಬಿದ್ದಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿತ್ತು. ತಕ್ಷಣ ಗಾಯಗೊಂಡ ವಿದ್ಯಾರ್ಥಿಯನ್ನು ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವಿದ್ಯಾರ್ಥಿಯ ಕುಟುಂಬಸ್ಥರು ಆತನನ್ನು ಕಮಾಂಡ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಯ ಬ್ಯಾಗ್‌ನಿಂದ ಪತ್ರವೊಂದರ ಫೋಟೊ ಕಾಪಿ ಪತ್ತೆಯಾಗಿದ್ದು, ಅದರಲ್ಲಿ ಶಾಲೆಯ ತರಗತಿ ಶಿಕ್ಷಕರನ್ನು ಉದ್ದೇಶಿಸಿ ಇಂಗ್ಲಿಷ್‌ನಲ್ಲಿ ಕೆಲ ವಿಷಯಗಳನ್ನು ಬರೆಯಲಾಗಿದೆ. ಪತ್ರದಲ್ಲಿ ನಾನು ಮಾಡಿದ ತಪ್ಪಿನ ಅರಿವಾಗಿದೆ, ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಮೇಡಂ. ಇದು ಮತ್ತೆ ಸಂಭವಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ವಿದ್ಯಾರ್ಥಿ ಈ ವಿಷಯಗಳನ್ನು ಏಕೆ ಬರೆದಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿಯ ಸಹಪಾಠಿಗಳಿಂದಲೂ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಇನ್‌ಸ್ಪೆಕ್ಟರ್ ತಿಳಿಸಿದರು.
ಇದನ್ನೂ ಓದಿ: ಪ್ರೇಮದ ಬಲೆಗೆ ಬಿದ್ದಿದ್ದ ವಿದ್ಯಾರ್ಥಿ ಸಾವು: ಪೋಕ್ಸೋ ಕಾಯ್ದೆಯಡಿ ಮಹಿಳಾ ಶಿಕ್ಷಕಿ ಬಂಧನ