ವಾರಾಣಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ವಾರಾಣಸಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಬಿಎಚ್‌ಯು) ಕ್ಯಾಂಪಸ್‌ನಲ್ಲಿ ಬುಧವಾರ (ನವೆಂಬರ್ 1) ವಿದ್ಯಾರ್ಥಿನಿಯೊಬ್ಬಳಿಗೆ ಅಪರಿಚಿತ ವ್ಯಕ್ತಿಗಳು ಲೈಂಗಿಕ ಕಿರುಕುಳ ನೀಡಿದ ಘಟನೆ ಜರುಗಿದೆ. ಈ ಘಟನೆ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಗುರುವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಐಐಟಿ ಹಾಗೂ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಕ್ಯಾಂಪಸ್ ನಡುವೆ ಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ.
ಬುಧವಾರ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತರೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ಈ ವೇಳೆ, ಬೈಕ್ನಲ್ಲಿ ಬಂದ ಮೂವರು ವ್ಯಕ್ತಿಗಳು, ವಿದ್ಯಾರ್ಥಿನಿಯನ್ನು ಬಲವಂತವಾಗಿ ಒಂದು ಮೂಲೆಗೆ ಎಳೆದೊಯ್ದು ಕಿರುಕುಳ ನೀಡಿದ್ದರು. ಈ ದುಷ್ಕರ್ಮಿಗಳು ಆಕೆಯ ಬಟ್ಟೆ ಬಿಚ್ಚಿಸಿ ವಿಡಿಯೋ ಮಾಡಿ ಫೋಟೋ ಕ್ಲಿಕ್ಕಿಸಿದ್ದಾನೆ. ಸುಮಾರು 15 ನಿಮಿಷಗಳ ಕಾಲ ಆಕೆಯನ್ನು ಹಿಡಿದುಕೊಂಡು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ ಎಂಬುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ. ಕ್ಯಾಂಪಸ್‌ಗೆ ಹೊರಗಿನವರು ಪ್ರವೇಶಿಸುವುದನ್ನು ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ. ಸತತ 11 ಗಂಟೆಗಳ ಕಾಲ ಐಐಟಿ ಪ್ರತಿಭಟನಾ ಪ್ರದರ್ಶನ ಮುಂದುವರೆದಿತ್ತು. ಜಿಲ್ಲಾಡಳಿತದ ಮಧ್ಯಪ್ರವೇಶದ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ಈ ವೇಳೆ, ಐಐಟಿ ಬಿಎಚ್‌ಯು ಮತ್ತು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ನಡುವೆ ಗೋಡೆ ನಿರ್ಮಿಸುವ ಬಗ್ಗೆ ಭರವಸೆಯನ್ನೂ ನೀಡಲಾಗಿದೆ. ಈ ವಿಷಯವು ವಿದ್ಯಾರ್ಥಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ಯಾವುದೇ ಸಂದರ್ಭದಲ್ಲೂ ಕ್ಯಾಂಪಸ್ ವಿಭಜಿಸಲು ಬಿಡುವುದಿಲ್ಲ ಎಂದು ಒಂದು ಗುಂಪಿನ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು, ವಿದ್ಯಾರ್ಥಿಗಳು ಬಿಎಚ್‌ಯು ಕೇಂದ್ರ ಕಚೇರಿಯ ಹೊರಗೆ ಭಿತ್ತಿ ಪತ್ರಗಳನ್ನು ಹಿಡಿದು ಪ್ರದರ್ಶನ ಪ್ರತಿಭಟನೆ ನಡೆಸಿದ್ದಾರೆ.
ಕ್ಯಾಂಪಸ್‌ನಲ್ಲಿ ಗೋಡೆ ನಿರ್ಮಿಸುವ ಮೂಲಕ ವಿದ್ಯಾರ್ಥಿಗಳನ್ನು ವಿಭಜಿಸುವ ಕೆಲಸವಾಗುತ್ತಿದೆ. ಕ್ಯಾಂಪಸ್‌ನಲ್ಲಿ ಮೊದಲ ಬಾರಿಗೆ ಇಂತಹ ಘಟನೆ ವರದಿಯಾಗಿಲ್ಲ. ಭದ್ರತೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದರೂ ಇಂತಹ ಘಟನೆಗಳು ನಿಲ್ಲುತ್ತಿಲ್ಲ. ಈ ವಿಷಯದಲ್ಲಿ ಜಿಲ್ಲಾಡಳಿತ ಮತ್ತು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಎಡವಿದೆ. ಹೊರಗಡೆಯಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಅದನ್ನು ತಡೆಯುವ ಬಗ್ಗೆ ಗಮನ ಹರಿಸಬೇಕು. ಕ್ಯಾಂಪಸ್ ವಿಭಜನೆಯಿಂದ ಪ್ರಯೋಜನವಿಲ್ಲ. ಆದಷ್ಟು ಬೇಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪುಣೆ ವಿಶ್ವವಿದ್ಯಾಲಯದ ಹಾಸ್ಟೆಲ್ ಗೋಡೆ ಮೇಲೆ ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ