ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಸಂಕಷ್ಟ ಎದುರಾಗಿದೆ. ಕೆಳ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಂತ್ರಸ್ತ ರೈತ ಕುಟುಂಬಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆಶಿಶ್ ಮಿಶ್ರಾಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ.
ಓದಿ: ಲಖೀಂಪುರ ಖೇರಿ ಹಿಂಸಾಚಾರದಲ್ಲಿ ಬಂಧಿತನಾಗಿದ್ದ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು, ಬಿಡುಗಡೆ
ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮೂರು ಕುಟುಂಬ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಲಖನೌ ಪೀಠದ ಜಾಮೀನು ಆದೇಶಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದ್ದರು.
ಫೆಬ್ರುವರಿ 15ರಂದು ಉತ್ತರಪ್ರದೇಶದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆಗೊಂಡಿದ್ದರು. ಆಶಿಶ್ ಮಿಶ್ರಾ ಅವರ ಪರ ವಕೀಲರು ಜಾಮೀನಿಗಾಗಿ ತಲಾ 3 ಲಕ್ಷ ರೂಪಾಯಿಗಳ 2 ಜಾಮೀನು ಬಾಂಡ್‌ಗಳನ್ನು ಕೋರ್ಟ್ಗೆ ಸಲ್ಲಿಸಿದ್ದರು. ಲಖೀಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 9 ಅಕ್ಟೋಬರ್ 2021 ರಂದು ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.
ಓದಿ: ಆಶಿಶ್ ಮಿಶ್ರಾಗೆ ಜಾಮೀನು: ಸುಪ್ರೀಂಕೋರ್ಟ್ ಮೊರೆ ಹೋದ ರೈತರ ಕುಟುಂಬಸ್ಥರು
ಅಕ್ಟೋಬರ್ 3, 2021 ರಂದು, ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರ ಆಂದೋಲನದ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಶಿಶ್ಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ್ದಲ್ಲದೇ ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿದೆ.