ನವದೆಹಲಿ: ಪ್ರವಾದಿ ಮೊಹಮ್ಮದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಪೀಠ, ಅರ್ಜಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸೂಚಿಸಿತು. ಅರ್ಜಿಯು ತುಂಬಾ ಸರಳವಾಗಿ ಹಾಗೂ ನಿರುಪದ್ರವಿಯಾಗಿ ಕಾಣುತ್ತದೆ. ಆದರೆ ಈ ಅರ್ಜಿಯು ತುಂಬಾ ದೂರಗಾಮಿ ಪರಿಣಾಮಗಳನ್ನು ಹೊಂದಿದೆ. ಹೀಗಾಗಿ ಅರ್ಜಿಯನ್ನು ಹಿಂಪಡೆಯುವಂತೆ ಸಲಹೆ ನೀಡುತ್ತಿದ್ದೇವೆ. ಅರ್ಜಿ ಹಿಂಪಡೆಯಲಾಗಿದೆ ಎಂದು ಪರಿಗಣಿಸಿ ಅರ್ಜಿ ವಜಾಗೊಳಿಸಲಾಗಿದೆ ಎಂದು ಪೀಠ ಹೇಳಿತು.
ರಾಷ್ಟ್ರೀಯ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡುವಾಗ, ಪ್ರವಾದಿಯವರ ಕುರಿತು ಶರ್ಮಾ ನೀಡಿದ ಹೇಳಿಕೆಯಿಂದ ಈ ವರ್ಷದ ಆರಂಭದಲ್ಲಿ ರಾಷ್ಟ್ರದಾದ್ಯಂತ ಭಾರಿ ವಿವಾದ ಸೃಷ್ಟಿಯಾಗಿ, ಹಿಂಸಾಚಾರ ನಡೆದಿತ್ತು. ಹಲವಾರು ಮುಸ್ಲಿಂ ರಾಷ್ಟ್ರಗಳು ಕೂಡ ಪ್ರತಿಭಟನೆ ದಾಖಲಿಸಿದ್ದವು. ಇದರ ಬೆನ್ನಲ್ಲೇ ಬಿಜೆಪಿ ಕೂಡ ಶರ್ಮಾ ಅವರ ಹೇಳಿಕೆಗಳಿಂದ ದೂರವಿದ್ದು, ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.