ನವದೆಹಲಿ: 12ನೇ ತರಗತಿ ಪರೀಕ್ಷಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳ ಸಿಎಂಗಳು ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮನವಿ ಮಾಡಿಕೊಂಡಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್ಸಿ ಹಾಗೂ ಐಸಿಎಸ್ಸಿ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಕೆಲ ರಾಜ್ಯ ಸರ್ಕಾರಗಳು ಈಗಾಗಲೇ ರಾಜ್ಯ ಶಿಕ್ಷಣ ಮಂಡಳಿ ಪರೀಕ್ಷೆಗಳನ್ನ ರದ್ದು ಮಾಡಿವೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
"ಸಿಬಿಎಸ್ಇಯಂತೆ, ಆಯಾ ರಾಜ್ಯದ ಶಿಕ್ಷಣ ಮಂಡಳಿಗಳು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಗೆ ಹೊರೆ ಆಗದಂತೆ ಹಾಗೂ ಅವರ ಅನುಕೂಲಕ್ಕೆ ತಕ್ಕಂತೆ ವಿದ್ಯಾರ್ಥಿ ಸ್ನೇಹಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು" ಎಂದು ಅವರು ಟ್ವೀಟ್ ಮಾಡಿದ್ದಾರೆ.
"ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಲು ಮತ್ತು ಅವರ ಆರೋಗ್ಯವನ್ನು ಕಾಪಾಡುವುದರ ಕಡೆ ಪ್ರಾಮುಖ್ಯತೆ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಶಿಕ್ಷಣ ಮಂತ್ರಿಗಳಿಗೆ ಮನವಿ ಮಾಡುತ್ತೇನೆ" ಎಂದು ಅವರು ಹೇಳಿದ್ದಾರೆ.
ಕೋವಿಡ್ -19 ರ ಕಾರಣದಿಂದಾಗಿ ಅನಿಶ್ಚಿತ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿಬಿಎಸ್‌ಇಯ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ಈ ವರ್ಷ ನಡೆಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿತ್ತು.
ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶಗಳನ್ನು ವಸ್ತುನಿಷ್ಠ ಮಾನದಂಡಗಳ ಪ್ರಕಾರ ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷದಂತೆ, ಕೆಲವು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಲು ಬಯಸಿದರೆ, ಅಂತಹ ಆಯ್ಕೆಯನ್ನು ಸಿಬಿಎಸ್‌ಇ ಕಲ್ಪಿಸಲು ನಿರ್ಧರಿಸಿದೆ.