ಆಂಧ್ರಪ್ರದೇಶ/ಬೆಂಗಳೂರು: ಗಾಂಜಾ ಆರೋಪಿಗಳನ್ನು ಸೆರೆ ಹಿಡಿಯಲು ತೆರಳುತ್ತಿದ್ದ ಬೆಂಗಳೂರಿನ ಮೂವರು ಪೊಲೀಸ್ ಸಿಬ್ಬಂದಿ ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಮುಲಿಕ್ ಹಾಗೂ ಕಾರು ಚಾಲಕ ಮೃತಪಟ್ಟವರೆಂದು ತಿಳಿದುಬಂದಿದೆ.
ಭಾನುವಾರ ಮುಂಜಾನೆ ಚಿತ್ತೂರು ಬಳಿ ಇನ್ನೋವಾ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮೂವರೂ ಸಿಬ್ಬಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ತಮಿಳುನಾಡಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ಪೊಲೀಸ್ ತಂಡ ಆಂಧ್ರಕ್ಕೆ ತೆರಳಿತ್ತು. ನಿನ್ನೆ ಬೆಂಗಳೂರಿನಿಂದ ಗಾಂಜಾ ಆರೋಪಿಗಳನ್ನು ಬೆನ್ನತ್ತಿ ತೆರಳಿದ್ದ ಸಿಬ್ಬಂದಿ, ಚಿತ್ತೂರಿನಿಂದ ತಿರುಪತಿಯತ್ತ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಕಲೆ ಹಾಕಿರುವ ಬೆಂಗಳೂರು ಪೊಲೀಸರು, ಸ್ಥಳಕ್ಕೆ ತೆರಳಿದ್ದಾರೆ.
ಗೃಹ ಸಚಿವರ ಪ್ರತಿಕ್ರಿಯೆ: ಅಪಘಾತದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. "ಘಟನೆ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಿಪಾಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟಿರುವುದು ಬಹಳ ನೋವು ತಂದಿದೆ" ಎಂದು ಸಚಿವರು ಹೇಳಿದ್ದಾರೆ.
ಪೊಲೀಸ್ ಕಮೀಷನರ್ ಸಂತಾಪ: ದುರಂತಕ್ಕೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಡಿಸಿಪಿ ಭೀಮಾಶಂಕರ್ ಗುಳೇದ್ ಶಿವಾಜಿನಗರ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು