ಶಾಮ್ಲಿ (ಉತ್ತರಪ್ರದೇಶ) : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರೈತ ಮುಖಂಡ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದೆ. ಆದರೆ, ಇಂದು (ಶನಿವಾರ) ಆ ಮನವಿಯನ್ನು ರಾಕೇಶ್ ಟಿಕಾಯತ್ ತಿರಸ್ಕರಿಸಿದ್ದಾರೆ. ಟಿಕಾಯತ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುವುದರ ವಿರುದ್ಧ ಹೋರಾಡುವುದಾಗಿ ತಿಳಿಸಿದ್ದಾರೆ.
ಭವಿಷ್ಯದಲ್ಲಿ ನಾವು ನಡೆಸುವ ಪ್ರತಿಭಟನೆಗಳಲ್ಲಿ ಬೆಳೆಗಳಿಗೆ ಗರಿಷ್ಠ ಬೆಂಬಲ ಬೆಲೆ ನೀಡಿಕೆ ಮತ್ತು ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ವಿಚಾರಗಳು ಇರುತ್ತವೆ ಎಂದು ರಾಕೇಶ್ ಟಿಕಾಯತ್ ಹೇಳಿದರು.
ಅದರೊಂದಿಗೆ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದಿರುವ ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ಮಾಡಿಕೊಂಡಿರುವ ಎಲ್ಲಾ ಒಪ್ಪಂದಗಳನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ಜಾರಿಗೊಳಿಸುತ್ತದೆ ಎಂಬ ನಂಬಿಕೆಯಿದೆ. ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ಹಣ ನೀಡುವಂತೆ ನೋಡಿಕೊಳ್ಳಬೇಕು. ಇದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಟಿಕಾಯತ್ ಹೇಳಿದ್ದಾರೆ.
ಹರಿಯಾಣದಲ್ಲಿ ವಿದ್ಯುತ್ ದರ ಎಷ್ಟಿದೆಯೋ ಆ ದರವನ್ನು ಉತ್ತರಪ್ರದೇಶದಲ್ಲೂ ಅಳವಡಿಕೆ ಮಾಡಿಕೊಳ್ಳಬೇಕು. ಶಿಕ್ಷಣ,ನಿರುದ್ಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆಯೂ ದನಿಯೆತ್ತಲಾಗುತ್ತದೆ ಎಂದಿರುವ ಅವರು, ಹೆಣ್ಣು ಮಕ್ಕಳ ವಿವಾಹ ವಯಸ್ಸನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲೇ ಉತ್ತರಪ್ರದೇಶ 'ಆಧುನಿಕ ರಾಜ್ಯ'ವಾಗಲಿದೆ.. ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆ ಬಳಿಕ ಪ್ರಧಾನಿ ಮಾತು