ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುತ್ತದೆ ಎಂಬ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿರುವ ಆಡಳಿತರೂಢ ತೃಣಮೂಲ ಕಾಂಗ್ರೆಸ್, ಇದು ಲೋಕಸಭೆ ಚುನಾವಣೆಯ ಮುನ್ನ ನೀಡಿರುವ ಸುಳ್ಳು ಭರವಸೆ ಎಂದು ಟೀಕಿಸಿದೆ. ಅಲ್ಲದೆ ಯಾವುದೇ ಕಾರಣಕ್ಕೂ ಮಮತಾ ಬ್ಯಾನರ್ಜಿ ಸರ್ಕಾರ ನಮ್ಮ ರಾಜ್ಯದಲ್ಲಿ ಈ ಕಾಯ್ದೆ ಅನುಷ್ಠಾನಕ್ಕೆ ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.
ಬುಧವಾರದಂದು ಕೋಲ್ಕತ್ತಾದಲ್ಲಿ ನಡೆದಿದ್ದ ಬಿಜೆಪಿಯ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದರು. ಈ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರದಂತೆ ಕೇಂದ್ರ ಸರ್ಕಾರವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ನಾವು ಅದನ್ನು ಅನುಷ್ಠಾನಗೊಳಿಸುತ್ತೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬೆಲೆ ತೆತ್ತಾದರೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ ಎಂದು ಗುಡುಗಿದ್ದರು.
ಅಲ್ಲದೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಇಂದಿಗೂ ಬಂಗಾಳದಲ್ಲಿ ಒಳ ನುಸುಳುವಿಕೆ, ಓಲೈಕೆಯ ರಾಜಕೀಯ, ಹಿಂಸೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ಗಳನ್ನು ಬಹಿರಂಗವಾಗಿ ವಿತರಿಸಲಾಗುತ್ತಿದೆ. ಆದರೆ ಸಿಎಂ ಮಮತಾ ಬ್ಯಾನರ್ಜಿ ಮೌನವಾಗಿದ್ದಾರೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ತೃಣಮೂಲ ಪಕ್ಷದ ಹಿರಿಯ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಚಿವೆ ಶಶಿ ಪಂಜಾ, ' ಅಮಿತ್ ಶಾ ಅವರಿಗೆ ಹೊಸದಾಗಿ ಮಾತನಾಡಲು ಬೇರೇನು ಇಲ್ಲ. ಹೀಗಾಗಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಮಮತಾ ಬ್ಯಾನರ್ಜಿ ಅವರು ನಮ್ಮ ರಾಜ್ಯದಲ್ಲಿ ಕಾಯ್ದೆಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟವಾಗಿ ಹೇಳಿದ್ದಾರೆ.
4 ವರ್ಷಗಳ ಹಿಂದೆ ಸಿಎಎ ಅಂಗೀಕಾರವಾಗಿದ್ದರೂ, ಅದರ ನಿಯಮಗಳನ್ನು ರೂಪಿಸಲು ಮಾತ್ರ ಒಂಬತ್ತು ವಿಸ್ತರಣೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳುವ ಮೂಲಕ ಚುನಾವಣೆಯ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದ ಬಗ್ಗೆ ಮಾತನಾಡಿದ್ದಕ್ಕೆ ಬಿಜೆಪಿಯನ್ನು ಅವರು ಟೀಕಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ವಿಷಯವನ್ನು ಈಗ ಎತ್ತಿರುವುದು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಇದು ಮತ್ತೊಂದು ಚುನಾವಣಾ ಪ್ರಮಾದವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಟಿಎಂಸಿ ಪಕ್ಷದ ರಾಜ್ಯ ವಕ್ತಾರ ಕುನಾಲ್ ಘೋಷ್, ಬಿಜೆಪಿಯವರು ಪೌರತ್ವ ತಿದ್ದುಪಡಿ ಮತ್ತು ರಾಮ ಮಂದಿರ ವಿಚಾರಗಳನ್ನು ಜನರೆದುರು ತೆರೆದಿಡುವ ಮೂಲಕ ತನ್ನ 'ಅಚ್ಛೇ ದಿನ್' ಭರವಸೆಯ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ. ಇದು ಚುನಾವಣೆಗೂ ಮುನ್ನದ ಸುಳ್ಳು ರಾಜಕೀಯ. ಮೊದಲು ಬಿಜೆಪಿಗರು ತಮ್ಮ ಪಕ್ಷದೊಳಗಿನ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:2024 ರಲ್ಲಿ ಮತ್ತೆ ಮೋದಿ ಪಿಎಂ, 2026 ರಲ್ಲಿ ಬಂಗಾಳದಲ್ಲಿ ಬಿಜೆಪಿ ಸರ್ಕಾರ: ಅಮಿತ್ ಶಾ