ಕುಲ್ಗಾಂ (ಜಮ್ಮು-ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಓಕೈ ಪ್ರದೇಶದಲ್ಲಿಂದು ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಓಕೈ ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಪೊಲೀಸರು, ಭಾರತೀಯ ಸೇನೆಯ 9 ಆರ್‌ಆರ್ ಮತ್ತು ಸಿಆರ್‌ಪಿಎಫ್ ತಂಡವು ಜಂಟಿಯಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಜಂಟಿ ತಂಡಗಳು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆಗ ಅವರಿಗೆ ಶರಣಾಗುವಂತೆ ಕೇಳಿಕೊಂಡರೂ ತಮ್ಮ ದುಷ್ಕೃತ್ಯವನ್ನು ಮುಂದುವರೆಸಿದ್ದಾರೆ. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಬಂಡುಕೋರ ಗುಂಪುಗಳ ನಡುವೆ ಘರ್ಷಣೆ: 16 ಮಂದಿ ಬಲಿ
ಹತರಾದ ಇಬ್ಬರೂ ಉಗ್ರರು ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಇ-ತೋಯ್ಬಾ ಅಥವಾ ಟಿಆರ್‌ಎಫ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಈ ಹಿಂದೆ ಅವರು ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್‌ಕುಮಾರ್ ತಿಳಿಸಿದ್ದಾರೆ.