ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ನಾಗರಿಕರು ಮೃತಪಟ್ಟಿದ್ದಾರೆ. ದಾಳಿ ನಡೆಸಿದವರು ಲಷ್ಕರ್-ಇ-ತೈಬಾ ಸಂಘಟನೆಯ ಉಗ್ರರು ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ದಾಳಿಯಲ್ಲಿ ಇನ್ನೂ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಸೋಪೋರ್ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಉಗ್ರನೊಬ್ಬ ಗಸ್ತು ತಿರುಗುತ್ತಿದ್ದ ಪೊಲೀಸರ ಗುಂಪಿನ ಮೇಲೆ ಗುಂಡು ಹಾರಿಸಿದ್ದು, ಆ ಬಳಿಕ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.
ನ್ಯಾಷನಲ್ ಕಾನ್ಫರನ್ಸ್ ಲೀಡರ್ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿ, ಉಗ್ರರ ಕೃತ್ಯವನ್ನು ಖಂಡಿಸಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ ಸಾಂತ್ವನ ಸಲ್ಲಿಸಿದ್ದಾರೆ.