ಪಿಲಿಭಿತ್(ಉತ್ತರ ಪ್ರದೇಶ):ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳಿಬ್ಬರನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆರಾಮೌ ಉತ್ತರ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ 16 ವರ್ಷದ ಬಾಲಕಿಯ ಮೇಲೆ 22 ರಿಂದ 25 ವರ್ಷ ವಯಸ್ಸಿನ ಇಬ್ಬರು ಯುವಕರು ಅತ್ಯಾಚಾರ ಯತ್ನ ನಡೆಸಿದ್ದಾರೆ. ಸಂತ್ರಸ್ತೆಯ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.
ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ ಯುವಕರನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಐಪಿಸಿ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಪೇದೆಯಿಂದ ಕಿರುಕುಳ, ಅಮಾನತು: ಲಕ್ನೋದ ಕ್ಯಾಂಟ್ ಪ್ರದೇಶದಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಬೆನ್ನಟ್ಟಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ಸಾದತ್ ಅಲಿ ಎಂಬಾತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಶೀಘ್ರದಲ್ಲೇ ಕೆಲಸದಿಂದಲೂ ವಜಾಗೊಳಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಯಾಂಟ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಕಾನ್‌ಸ್ಟೇಬಲ್ ಸಾದತ್ ಅಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮಂಗಳವಾರ ವೈರಲ್ ಆಗಿದೆ. ವಿಡಿಯೋದಲ್ಲಿ ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದು ಸ್ಪಷ್ಟವಾಗಿದೆ. ಸಂತ್ರಸ್ತೆಯ ತಾಯಿ ಆರೋಪಿ ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿಸಿಪಿ ಹೃದಯೇಶ್ ಕುಮಾರ್, ಸಾದತ್ ಅಲಿಯನ್ನು ಅಮಾನತುಗೊಳಿಸಿದ್ದಾರೆ. ಬಂಧಿತರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಕೆಲಸದಿಂದ ವಜಾಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಹೇಳಿದರು. ಬಂಧಿತ ಕಾನ್‌ಸ್ಟೇಬಲ್ ಇತರೆ ಕೆಲವು ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿದ್ದ ಎಂಬ ಅಂಶವೂ ಬಯಲಿಗೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬುಧವಾರ ಮೋಹನ್‌ಲಾಲ್‌ಗಂಜ್‌ನಿಂದ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಸಾದತ್ ಅಲಿ, ಕ್ಯಾಂಟ್‌ನಲ್ಲಿ ಶಾಲೆಯಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಕಿರುಕುಳ ನೀಡಿದ್ದಾನೆ. ಘಟನೆಯ ಎಲ್ಲ ದೃಶ್ಯವನ್ನು ಮಹಿಳೆಯೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಇದನ್ನೂಓದಿ: ಖರ್ಗೆ ಕುಟುಂಬ ಹತ್ಯೆ ಆಡಿಯೋ ಆರೋಪ: ಸೈಬರ್ ಕ್ರೈಂಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ದೂರು