ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಡಿಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರು ಪೊಲೀಸರು ಹಾಗೂ ತಮ್ಮ ಪೋಷಕರ ಮನವಿಯ ಮೇರೆಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಡಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳ ತಂಡ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸ್ಥಳೀಯ ಭಯೋತ್ಪಾದಕರು ಅವರ ಪೋಷಕರ ಮನವಿಯ ಮೇರೆಗೆ ಶರಣಾಗಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದ್ದು, ಹಲವು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಪ್ತಚರ ಇಲಾಖೆ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಬಾರಾಮುಲ್ಲಾದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕುಟ್ಟಾ ಮಾಡ್ ಪಟ್ಟಣದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂದು ಶಂಕಿಸಲಾದ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಥಳಕ್ಕೆ ಬಿಡಿಎಸ್ ತಂಡ ತೆರಳಿದ್ದು, ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ. ಮುಂದಿನ ಆದೇಶದವರೆಗೆ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: ಕುಲ್ಗಾಮ್ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾಪಡೆ