ಮುಂಬೈ (ಮಹಾರಾಷ್ಟ್ರ): ಬಿಹಾರ ಮುಖ್ಯಮಂತ್ರಿ, ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಜೂನ್ 12 ರಂದು ಕರೆದಿರುವ ಪ್ರತಿಪಕ್ಷಗಳ ನಾಯಕರ ಬೃಹತ್ ಸಭೆಯಲ್ಲಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ. ಎಲ್ಲ ಪ್ರಮುಖ ಪ್ರತಿಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆ ಇದ್ದು, ಈ ಸಭೆಯಲ್ಲಿ ಉದ್ಧವ್ ಠಾಕ್ರೆ ಕೂಡ ಉಪಸ್ಥಿತರಿರುತ್ತಾರೆ ಎಂದು ಪಕ್ಷದ ನಾಯಕ ಸಂಜಯ್ ರಾವತ್ ತಿಳಿಸಿದ್ದಾರೆ.
ಸಿಎಂ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಗುರುತಿಸಿಕೊಳ್ಳದ ಎಲ್ಲ ಹಿರಿಯ ನಾಯಕರನ್ನು ಮತ್ತು 2024ರಲ್ಲಿ ಬದಲಾವಣೆ ಬಯಸುವ ಎಲ್ಲ ದೇಶಭಕ್ತ ಪಕ್ಷಗಳನ್ನು ಜೂನ್ 12ರಂದು ಪಾಟ್ನಾಗೆ ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರಿಗೂ ಆಹ್ವಾನ ನೀಡಲಾಗಿದೆ. ನಾವು ಪಾಟ್ನಾಗೆ ಹೋಗಲು ಯೋಚಿಸುತ್ತಿದ್ದೇವೆ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳ ಒಗ್ಗಟ್ಟು ರೂಪಿಸುವ ಹೊಸ ಪ್ರಯತ್ನದ ಭಾಗವಾಗಿ ನಿತೀಶ್ ಕುಮಾರ್ ಈ ಸಭೆಯನ್ನು ಕರೆದಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಅವರು ಹೊರ ಬಂದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮ ವಹಿಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಪ್ರಮುಖರೊಂದಿಗೆ ಸಭೆ ಮಾಡಿ ಮಾತುಕತೆ ಸಹ ನಡೆಸಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳುವಲ್ಲಿ ಎಲ್ಲ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವುದು ನಿತೀಶ್ ಉದ್ದೇಶವಾಗಿದೆ. 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಇದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ನಂಬಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಮತ್ತು ದೆಹಲಿ ಅರವಿಂದ್ ಕೇಜ್ರಿವಾಲ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಒಂದೇ ವೇದಿಕೆಗೆ ತರುವುದು ನಿತೀಶ್ ಕುಮಾರ್ ಅವರಿಗೆ ದೊಡ್ಡ ಸವಾಲಾಗಿದೆ. ಯಾಕೆಂದರೆ, ಈಗಾಗಲೇ ಕೇಜ್ರಿವಾಲ್ ಮತ್ತು ಕೆಸಿಆರ್ ಮೇಲೆ ನಂಬಿಕೆ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಕಳೆದ ವರ್ಷ ತಮ್ಮದೇ ಪಕ್ಷದ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಾಸಕರ ಬಂಡಾಯದ ನಂತರ ಪತನಗೊಂಡಿತ್ತು. ಏಕನಾಥ್ ಶಿಂಧೆ ತಮ್ಮದೇ ಆದ ಬಣವನ್ನು ಕಟ್ಟಿಕೊಂಡು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಶಿಂಧೆ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಉದ್ಧವ್ ಠಾಕ್ರೆಯವರ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಶಿವಸೇನೆ (ಯುಬಿಟಿ), ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಒಳಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ - ಶಿಂಧೆ ಬಣದ ವಿರುದ್ಧ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿದೆ.
ಇದನ್ನೂ ಓದಿ: 2024ರ ಚುನಾವಣೆಗೆ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ: ಶರದ್ ಪವಾರ್, ಉದ್ಧವ್ ಠಾಕ್ರೆ ಭೇಟಿಯಾದ ನಿತೀಶ್ ಕುಮಾರ್