ಮೀರತ್ (ಉತ್ತರ ಪ್ರದೇಶ): ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭಾರಿ ಬೆಂಕಿಯಿಂದಾಗಿ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಎಂಜಿನಿಯರ್ವೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮೊಹಿಯುದ್ದೀನ್‌ಪುರದಲ್ಲಿ ನಡೆದಿದೆ. ಮೃತರನ್ನು ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.
ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಶಾರ್ಟ್ ಸರ್ಕ್ಯೂಟ್‌ನಿಂದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಆದರೆ, ಬೆಂಕಿ ವ್ಯಾಪಕವಾಗಿ ಹರಡುತ್ತಿದ್ದಂತೆ ಇಂಜಿನಿಯರ್ ನರೇಂದ್ರ ಕುಮಾರ್ ಮೂರನೇ ಮಹಡಿಯಿಂದ ಜಿಗಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂರನೇ ಮಹಡಿಯಿಂದ ಜಿಗಿದ ಪರಿಣಾಮ ನರೇಂದ್ರ ಕುಮಾರ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಎಂಜಿನಿಯರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಂಜಿನಿಯರ್ ನರೇಂದ್ರ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಕೂಡಲೇ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದ ನಿಖರ ಕಾರಣದ ಬಗ್ಗೆ ತನಿಖೆ ನಡೆಸುವಂತೆ ಸಕ್ಕರೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಕಚೇರಿಗೆ 6 ವರ್ಷಗಳಿಂದ ರೈತನ ಅಲೆದಾಟ.. 211 ಬಾರಿ ದೂರು ಸಲ್ಲಿಕೆ, ಕಾಗದ ಪತ್ರಿಗಳ ತೂಕವೇ 12 ಕೆಜಿ!