ಲಕ್ನೋ (ಉತ್ತರಪ್ರದೇಶ): ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ವಿರುದ್ಧ ನಿರಂತರ ಅತ್ಯಾಚಾರ, ಬಲವಂತದ ಗರ್ಭಪಾತ, ಬೆದರಿಕೆ ಹಾಕಿದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯುಪಿಎಸ್‌ಸಿ ಆಕಾಂಕ್ಷಿಯಾಗಿರುವ 23 ವರ್ಷದ ಸಂತ್ರಸ್ತೆಯು ತನ್ನ ಮೇಲೆ ಪೊಲೀಸ್ ಅಧಿಕಾರಿ ದೌರ್ಜನ್ಯ ನಡೆಸಿರುವ ಸಾಕ್ಷ್ಯಗಳು ಇವೆ. ಜೊತೆಗೆ ಆರೋಪಿತ ಹೆಚ್ಚುವರಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಸಂತ್ರಸ್ತೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಸಂತ್ರಸ್ತ ಯುವತಿಯು ಎಎಸ್ಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಯುವತಿಯು ಸಾಮಾಜಿಕ ಜಾಲತಾಣದಲ್ಲಿ ತನಗಾದ ಅನ್ಯಾಯದ ಬಗ್ಗೆ ಹಂಚಿಕೊಂಡಿದ್ದರು. ಬಳಿಕ ಎಚ್ಚೆತ್ತ ಪೊಲೀಸರು ಎಸಿಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಭಯೋತ್ಪಾದನಾ ನಿಗ್ರಹ ದಳ(ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್)ದ ಎಎಸ್ಪಿ ರಾಹುಲ್ ಶ್ರೀವಾಸ್ತವ್ ಅವರು ಕಳೆದ ಕೆಲವು ವರ್ಷಗಳಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ 2023ರ ಎಪ್ರಿಲ್ ತಿಂಗಳಲ್ಲಿ ಗರ್ಭಿಣಿಯಾದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಐದು ವರ್ಷಗಳ ಹಿಂದೆ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಎಎಸ್ಪಿ ಶ್ರೀವಾಸ್ತವ್ ಅವರ ಪರಿಚಯವಾಗಿತ್ತು. ಈ ನಡುವೆ ಎಎಸ್ಪಿ ತನ್ನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದಿದ್ದಾರೆ. ಈ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.
ಈ ಪ್ರಕರಣ ಸಂಬಂಧ ಎಎಸ್ಪಿ ಅವರ ನಾಲ್ವರು ಗೆಳೆಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 376 (ಅತ್ಯಾಚಾರ), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತ) ಮತ್ತು 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಆರಂಭವಾಗಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೋಮತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಕೇರಳದಲ್ಲಿ ಹೋಮ್ ಸ್ಟೇ ಮಾಲೀಕ ಸೆರೆ