ಪ್ರಯಾಗರಾಜ್ (ಉತ್ತರ ಪ್ರದೇಶ): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಕಾಂಗ್ರೆಸ್ನಿಂದ ಸಿಎಂ ಅಭ್ಯರ್ಥಿ ಯಾರಾಗಬೇಕು, ಯಾರಾಗುತ್ತಾರೆ ಅನ್ನೋ ಕುತೂಹಲ ಹೆಚ್ಚಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಸಿಎಂ ಅಭ್ಯರ್ಥಿ ಯಾರಾಗಬೇಕೆಂದು ಅವರೇ ನಿರ್ಧರಿಸುತ್ತಾರೆ. ಒಂದು ವೇಳೆ ಅವರೇ ಸಿಎಂ ಅಭ್ಯರ್ಥಿಯಾದರೂ, ಅವರೇ ಅದನ್ನು ಘೋಷಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ವಿಚಾರವಾಗಿ ಮಾತನಾಡಿದ ಖುರ್ಷಿದ್, ನಾವಿಗಾಗಲೇ ಪಕ್ಷದ ಅಧ್ಯಕ್ಷರನ್ನು ಹೊಂದಿದ್ದೇವೆ. ನಮಗೆ ಬೇರೊಬ್ಬ ಅಧ್ಯಕ್ಷರ ಅಗತ್ಯವಿಲ್ಲ. ಕೆಲವರಿಗೆ ಈಗಿರುವ ಅಧ್ಯಕ್ಷರನ್ನು ಕಂಡರೆ ಆಗುತ್ತಿಲ್ಲ. ಹಾಗಾಗಿ ಹೊಸ ಅಧ್ಯಕ್ಷರ ಹುಡುಕಾಟದಲ್ಲಿದ್ದಾರೆ ಎಂದರು.
ಶನಿವಾರ, ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗವು ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಕಳೆದ ವಾರ, ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್ ಕೂಡ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು.
ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಹುಲ್ ನೇಮಿಸುವಂತೆ ಸಾಮಾಜಿಕ ಮಾಧ್ಯಮ ಘಟಕ ನಿರ್ಣಯ
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. 403 ಸ್ಥಾನಗಳಿರುವ ಉತ್ತರಪ್ರದೇಶದಲ್ಲಿ ಎಸ್ಪಿ 47 ಸ್ಥಾನ, ಬಿಎಸ್ಪಿ 19 ಸ್ಥಾನ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಮಾತ್ರ ಗೆದ್ದಿತ್ತು.