ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮಾಜಿ ಡಿಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಸಿರತು ಕ್ಷೇತ್ರದಿಂದ ಸೋತಾಗಿನಿಂದ ಈ ಬಾರಿ ಯೋಗಿ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗುವುದಿಲ್ಲ ಎಂಬ ಊಹಾಪೋಹಗಳಿವೆ. ಆದರೆ, ಚುನಾವಣೆಯಲ್ಲಿ ಸೋತರೂ ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಮುಂದುವರಿಸಲು ಪಕ್ಷದ ಕೇಂದ್ರ ನಾಯಕರ ನಿರ್ಧಾರ ಮಾಡಿದ್ದಾರೆ. ಈ ತೀರ್ಮಾನದ ಬಳಿಕ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಮುಂದುವರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ಪುಷ್ಕರ್ ಸಿಂಗ್ ಧಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಿದೆ. ಉತ್ತರಾಖಂಡದಲ್ಲಿ ವಿಧಾನ ಪರಿಷತ್ ಕೂಡ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಧಾಮಿ ಬಿಜೆಪಿ ಶಾಸಕರ ಸ್ಥಾನದಲ್ಲಿ ಚುನಾವಣೆಗೆ ಸ್ಪರ್ಧಿಸಿ ಆರು ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿದೆ. ಚುನಾವಣೆಯಲ್ಲಿ ಸೋತರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ.
ಇಂತಹ ಪರಿಸ್ಥಿತಿಯಲ್ಲಿ ತಜ್ಞರ ಅಭಿಪ್ರಾಯದ ಪ್ರಕಾರ, ಉತ್ತರಾಖಂಡ ಮಾದರಿಯಲ್ಲಿ ಉತ್ತರಪ್ರದೇಶದಲ್ಲಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮತ್ತೆ ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ.
ಕೇಶವ್ ಪ್ರಸಾದ್ ಮೌರ್ಯ ಅವರು ಕೌಶಂಬಿಯ ಸಿರತು ವಿಧಾನಸಭಾ ಕ್ಷೇತ್ರದಿಂದ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿ ಪಲ್ಲವಿ ಪಟೇಲ್ ವಿರುದ್ಧ 7,000ಕ್ಕೂ ಹೆಚ್ಚು ಮತಗಳಿಂದ ಸೋಲು ಅನುಭವಿಸಿದ್ದಾರೆ. ಮತ್ತೊಂದೆಡೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋತಿದ್ದಾರೆ. ಇದರ ಹೊರತಾಗಿಯೂ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದು, ಇದೀಗ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿರ್ಧಾರದ ನಂತರ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮತ್ತೆ ಉಪಮುಖ್ಯಮಂತ್ರಿ ಮಾಡಬಹುದು ಎಂಬ ಊಹಾಪೋಹಗಳು ಉತ್ತರ ಪ್ರದೇಶದಲ್ಲಿ ಹರಿದಾಡುತ್ತಿವೆ.
ಇದನ್ನೂ ಓದಿ: ಉತ್ತರಾಖಂಡ್ ಮುಖ್ಯಮಂತ್ರಿ ಆಯ್ಕೆ: ಚುನಾವಣೆಯಲ್ಲಿ ಸೋತರೂ ಪುಷ್ಕರ್ಗೆ ಪಟ್ಟ!
ಇನ್ನೂ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಪೂರ್ಣಾವಧಿ ಪೂರ್ಣಗೊಳಿಸಿದ ನಂತರ ಕಳೆದ 37 ವರ್ಷಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿಯಾಗಲಿದ್ದು, ಮಾರ್ಚ್ 25 ರಂದು ಇಕಾನಾ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರ ನಾಯಕರು ಭಾಗಿಯಾಗಲಿದ್ದಾರೆ.