ನವದೆಹಲಿ: ನೂತನ ಉಪರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದ್ದು, ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ. ಇಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಇದನ್ನೂ ಓದಿ: ನಾಳೆ 'ಮಹಾ'ಪತನ? ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಒಪ್ಪಿಕೊಂಡ ರಾಜ್ಠಾಕ್ರೆ
ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದ್ದು, ಅಂದೇ ಮತಗಳ ಎಣಿಕೆ ಪ್ರಕ್ರಿಯೂ ನಡೆಯಲಿದೆ.
ಜುಲೈ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜುಲೈ 19ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಜುಲೈ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ ಪಡೆದುಕೊಳ್ಳಲು ಜುಲೈ 22 ಕೊನೆಯ ದಿನ.
ವೆಂಕಯ್ಯ ನಾಯ್ಡು ಪ್ರಸ್ತುತ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ.
ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ 21ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ. ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳು ಯಶವಂತ್ ಸಿನ್ಹಾ ಅವರನ್ನು ತಮ್ಮ ಅಭ್ಯರ್ಥಿಯಾಗಿ ಕಣಕ್ಕಿಳಿಸಿವೆ.