ಗೋವಾ/ಉತ್ತರ ಪ್ರದೇಶ: ಪಂಚರಾಜ್ಯ ಚುನಾವಣೆಗಳ ಪೈಕಿ ಇಂದು ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. ಗೋವಾದಲ್ಲಿಯೂ ಸಹ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಉತ್ತರಾಖಂಡನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.
ಉತ್ತರ ಪ್ರದೇಶದ 55 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರಿಗೆ ವೋಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇಂದಿನ ಚುನಾವಣೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಉತ್ತರಾಖಂಡದ ಮಾಜಿ ಸಿಎಂ ಹರೀಶ್ ಸಿಂಗ್ ರಾವತ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಕಣದಲ್ಲಿರುವ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.
ಗೋವಾದ 40 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, 301 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉತ್ತರಾಖಂಡದ 70 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಉತ್ತರಪ್ರದೇಶದಲ್ಲಿ ಮಾ.10ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಈಗ ಎರಡನೇ ಹಂತದಲ್ಲಿ 9 ಜಿಲ್ಲೆಗಳ 55 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 586 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಾ.10ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.