ಕೋಲ್ಕತ್ತಾ /ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗಾಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇಂದು ವ್ಹೀಲ್ಚೇರ್ ಮೂಲಕ ರೋಡ್ ಶೋ ನಡೆಸಲಿದ್ದಾರೆ ಎಂದು ಟಿಎಂಸಿ ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣಾ ಪ್ರಚಾರದ ವೇಳೆ ಗಾಯಗೊಂಡು ಚಿಕಿತ್ಸೆ ಪಡೆದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಮಧ್ಯಾಹ್ನ ಗಾಂಧಿ ಮೂರ್ತಿಯಿಂದ ಹಜ್ರಾವರೆಗೆ ವ್ಹೀಲ್ಚೇರ್ನಲ್ಲಿಯೇ ರೋಡ್ ಶೋ ನಡೆಸಲಿದ್ದು, ನಂತರ ಹಜ್ರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ವಾರದ ಆರಂಭದಲ್ಲಿ ಮಾರ್ಚ್ 10 ರಂದು ನಾಮಪತ್ರ ಸಲ್ಲಿಕೆ ಮಾಡಿ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ನಾಲ್ಕೈದು ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಮತಾ ಆರೋಪ ಮಾಡಿದ್ದರು. ಜತೆಗೆ ಅವರ ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ನೋವಾಗಿತ್ತು. ಹೀಗಾಗಿ ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಾರ್ಚ್ 12 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಇಂದು ಮೊದಲು ಬಾರಿಗೆ ಮತ್ತೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ.
ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್- ಎಡ ಮೈತ್ರಿ ಮತ್ತು ಬಿಜೆಪಿ ಇವುಗಳ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 294 ವಿಧಾನಸಭಾ ಕ್ಷೇತ್ರಗಳಿಗೆ ಮಾರ್ಚ್ 27 ರಿಂದ ಏಪ್ರಿಲ್ 29ರ ವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮತ ಎಣಿಕೆ ಮೇ 2 ರಂದು ನಡೆಯಲಿದೆ.