ಕೋಲ್ಕತ್ತಾ: ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗಾಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಾಮಪತ್ರ ಸಲ್ಲಿಕೆ ಮಾಡಿ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ನಾಲ್ಕೈದು ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಮತಾ ಆರೋಪ ಮಾಡಿದ್ದರು. ಜತೆಗೆ ಅವರ ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ನೋವಾಗಿತ್ತು. ಹೀಗಾಗಿ ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಚೇತರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಮನೆಗೆ ತೆರಳಲಿದ್ದು, ಮುಂದಿನ ವಾರ ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ಬರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರದ್ದು ಚಿಕಿತ್ಸೆ ಪಡೆಯಿರಿ ಎಂದು ವೈದ್ಯರು ಸೂಚಿಸಿದ್ದರೂ ಅವರು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಚುನಾವಣೆ ಘೋಷಣೆಯಾಗಿರುವ ಕಾರಣ ನಾಳೆಯಿಂದ ಟಿಎಂಸಿ ನಾಯಕಿ ಪ್ರಚಾರ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ.