ಗುವಾಹಟಿ( ಅಸ್ಸೋಂ): ಭಾರತೀಯ ಜನತಾ ಪಕ್ಷ ಮಂಗಳವಾರ ಅಸ್ಸೋಂ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅಸ್ಸೋಂ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ತಿದ್ದುಪಡಿಗೊಳಿಸುವ ಕೆಲಸ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ ಆಶ್ವಾಸನೆ ನೀಡಿದ್ದಾರೆ.
ಗುವಾಹಟಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನುಸುಳುಕೋರರನ್ನು ತಡೆಯಲು ಭಾರತೀಯ ಮೂಲ ನಿವಾಸಿಗಳನ್ನು ರಕ್ಷಿಸುವುದಾಗಿ ಭರವಸೆ ನೀಡಿದರು.
ಅಸ್ಸೋಂ ಮೂಲ ನಿವಾಸಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ. ಒಳನುಸುಳುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಇದರ ಜೊತೆಗೆ ಗಡಿ ನಿರ್ಧಾರಗಳಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಇತ್ಯರ್ಥಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಆಶ್ವಾಸನೆ ನೀಡಿದ್ದಾರೆ.
ಅಸ್ಸೋಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 6 ರವರೆಗೂ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.