ಹಿಸಾರ್ (ಹರಿಯಾಣ): ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಲು ಬಂದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿದ ಪರಿಣಾಮ ಹಲವು ಮಹಿಳೆಯರು ಗಾಯಗೊಂಡಿದ್ದಾರೆ.
ಕೋವಿಡ್-19 ಆಸ್ಪತ್ರೆ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಇಂದು ಹಿಸಾರ್ಗೆ ತೆರಳಿದ್ದರು. ಇದನ್ನ ವಿರೋಧಿಸಿ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ರೈತರು ಆಗಮಿಸಿದ್ದರು. ಮುಖ್ಯಮಂತ್ರಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿರುವ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಬೆಳಗ್ಗೆ ಪ್ರಾರಂಭವಾದ ಪ್ರತಿಭಟನೆಯಲ್ಲಿ ಅನೇಕ ಮಹಿಳಾ ರೈತರು ಗಾಯಗೊಂಡಿದ್ದಾಗಿ ತಿಳಿದು ಬಂದಿದ್ದು, ಅದರ ವಿಡಿಯೋ ತುಣುಕು ವೈರಲ್ ಆಗಿದೆ. ಮಹಿಳೆಯೋರ್ವಳ ತಲೆಗೆ ಗಂಭೀರವಾದ ಗಾಯವಾಗಿದೆ. ತಕ್ಷಣವೇ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ವಿಗ್ನತೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.