ಲಕ್ನೋ(ಉತ್ತರ ಪ್ರದೇಶ): ಮುಂದಿನ ವರ್ಷ ನಡೆಯಲಿರುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದಾರೆ. ಇದು ಉತ್ತರ ಪ್ರದೇಶ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಚುನಾವಣೆಗೆ ತಮ್ಮ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಡುವೆ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿರುವ ಅವರು, ಆರ್‌ಎಲ್‌ಡಿ ಜತೆಗಿನ ನಮ್ಮ ಮೈತ್ರಿ ಅಂತಿಮವಾಗಿದೆ. ಸೀಟು ಹಂಚಿಕೆ ಮಾತ್ರ ಬಾಕಿ ಉಳಿದಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಅಖಿಲೇಶ್ ಅಜಂಗಢ ಕ್ಷೇತ್ರದ ಸಂಸದರೂ ಹೌದು. ಜೊತೆಗೆ, ಸಮಾಜವಾದಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಕೂಡಾ. ಆದರೆ ಈ ನಡುವೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದು ಸಂಚಲನ ಸೃಷ್ಟಿಸಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.
ಅಖಿಲೇಶ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಸ್ಥಾಪಿಸಿರುವ ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ) (ಪಿಎಸ್‌ಪಿಎಲ್)ದೊಂದಿಗೆ ಒಟ್ಟಾಗಿ ಚುನಾವಣೆಗೆ ಹೋಗುವ ಸಾಧ್ಯತೆಗಳ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್, ಈ ವಿಚಾರದಲ್ಲಿ ನನಗೆ ಯಾವುದೇ ತೊಂದರೆ ಇಲ್ಲ, ಅವರಿಗೆ ಮತ್ತು ಅವರ ಜನರಿಗೆ ಸರಿಯಾದ ಗೌರವ ನೀಡಲಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.