ನವದೆಹಲಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾನುವಾರ ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಉತ್ತರ ಪ್ರದೇಶದಲ್ಲಿ ನೂತನ ಸಚಿವ ಸಂಪುಟ ರಚನೆ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಯುಪಿ ಚುನಾವಣೆಯಲ್ಲಿ ಗೆದ್ದ ಕಾರಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ಅಭಿನಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಆದಿತ್ಯನಾಥ್ ಅವರು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಸಹ ಭೇಟಿ ಮಾಡಿದ್ದರು. ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಮತ್ತು ಸಚಿವ ಸಂಪುಟ ರಚನೆ ಕುರಿತು ಚರ್ಚೆ ನಡೆಸಿದರು.
ಬಿ. ಎಲ್ ಸಂತೋಷ್ ಅವರೊಂದಿಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಆದಿತ್ಯನಾಥ್ ಅವರು ಹೇಳಿಕೊಂಡಿದ್ದಾರೆ. ಆದರೆ, ಹೊಸ ಸಚಿವ ಸಂಪುಟ ರಚನೆಯ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ. ಆದಿತ್ಯನಾಥ್ ಅವರು ಸಂತೋಷ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಕೂಡ ಉಪಸ್ಥಿತರಿದ್ದರು.
ಓದಿ: ಉಕ್ರೇನ್ನಿಂದ ತಾತ್ಕಾಲಿಕವಾಗಿ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ