ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು. ಪಕ್ಷದ ಮುಖ್ಯಸ್ಥರನ್ನಾಗಿ ಅವರನ್ನೇ ನೇಮಿಸಬೇಕೆಂಬ ಪಕ್ಷ ನಿರ್ಣಯವನ್ನು ನಿನ್ನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಮಂಡಿಸಿದೆ.
'ರಾಹುಲ್ ರಿಟರ್ನ್ಸ್' ಎಂಬ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ಆರಂಭಿಸಿದ್ದು, ಈ ಹಿಂದೆ ಕೂಡ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಛತ್ತೀಸ್ಗಢ ಪ್ರದೇಶ ಕಾಂಗ್ರೆಸ್ ಸಮಿತಿಯು ಪಕ್ಷದ ಅಧ್ಯಕ್ಷರಾಗಿ ರಾಗಾ ಅಧಿಕಾರ ವಹಿಸಿಕೊಳ್ಳಬೇಕೆಂದು ನಿರ್ಣಯ ಮಂಡಿಸಿದ್ದವು.
ಇದನ್ನೂ ಓದಿ: 'ವಿವಾದ್ ಸೆ ವಿಶ್ವಾಸ್' ನೇರ ತೆರಿಗೆ ವಿವಾದ ಪರಿಹಾರ ಯೋಜನೆ ಶೇ28ರಷ್ಟು ಯಶಸ್ವಿ
"ರಾಹುಲ್ ಗಾಂಧಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬುದು ಕೇವಲ ನಿರ್ಣಯವಲ್ಲ ಆದರೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿದೆ" ಎಂದು ಯುವ ಕಾಂಗ್ರೆಸ್ ಟ್ವೀಟ್ ಮಾಡಿದೆ.
2019ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ನೈತಿಕ ಜವಾಬ್ದಾರಿ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಪ್ರಸ್ತುತ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆಯಾಗಿದ್ದು, ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ಜೂನ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.