ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ 2021-22ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಪರಿಷತ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಂಡಿಸಲು ತ್ವರಿತವಾಗಿ ಕರಡು ಕ್ರಿಯಾಯೋಜನೆಯನ್ನು ತಯಾರಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಎರಡು ದಿನಗಳ ಅವಧಿ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನ ಆರ್ಥಿಕ ಹಾಗೂ ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ 25,916 ಕೋಟಿ ರೂ ಅಂತಿಮವಾಗಿ ಹಂಚಿಕೆಯಾಗಿತ್ತು, ಅದರಲ್ಲಿ 24,568 ಕೋಟಿ ರೂ (ಶೇ.95) ಅನ್ನು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ.
ಈ 35 ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗುವಂತಹ ಯೋಜನೆ/ಕಾರ್ಯಕ್ರಮಗಳ ಕರಡು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಬೇಕು. ಎಲ್ಲಾ ಇಲಾಖೆಗಳ ಕ್ರೂಡಿಕೃತ ಕರಡು ಕ್ರಿಯಾಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು. ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಿ, ಅಂತಿಮವಾಗಿ ಅನುಮೋದನೆಯನ್ನು ನೀಡಲಾಗುವುದು ಎಂದು ಹೇಳಿದರು.
ಸದ್ಯದಲ್ಲೇ 2021-22 ನೇ ಸಾಲಿನ ಕ್ರಿಯಾಯೋಜನೆ ಅನುಮೋದನೆಗೆ ಕ್ರಮವಹಿಸಲಾಗುವುದು. ಈಗಾಗಲೇ ಹಿಂದಿನ ವರ್ಷಗಳಂತೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ಮೊದಲನೇ ತ್ರೈಮಾಸಿಕ ಅನುದಾನವನ್ನು ವೆಚ್ಚ ಮಾಡಲು ಎಲ್ಲಾ ಇಲಾಖೆಗಳಿಗೆ ಅನುಮತಿ ನೀಡಲಾಗಿದ್ದು, ಈ ಎಲ್ಲಾ ಇಲಾಖೆಗಳು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಯಾವುದೇ ವಿಳಂಬ ಮಾಡದೇ ಯೋಜನೆಗಳ ಅನುಷ್ಠಾನಗೊಳಿಸಬೇಕು ಎಂದು ಅವರು ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳನ್ನು ಸಮುದಾಯವು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಯಾಗಬೇಕು ಎಂದು ಸಚಿವರು ಮನವಿ ಮಾಡಿದರು.