ಬೀದರ್: ವಿಶ್ವಗುರು ಬಸವಣ್ಣನವರ ಕಾರ್ಯ ಕ್ಷೇತ್ರ ಬಸವಕಲ್ಯಾಣ, ಐಕ್ಯ ಸ್ಥಳ ಕೂಡಲಸಂಗಮ, ಜನ್ಮಸ್ಥಳ ಬಸವನ ಬಾಗೇವಾಡಿ ಸೇರಿದಂತೆ 12ನೇ ಶತಮಾನದ ಶರಣರ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನಕ್ಕಾಗಿ ಶೀಘ್ರದಲ್ಲೇ ದೆಹಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬುಧವಾರ ಬಸವಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಟ್ರಸ್ಟ್ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅನುಭವ ಮಂಟಪ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಶರಣರ ಇತಿಹಾಸದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿದುಕೊಂಡಿದ್ದು, ಬಸವ ಭೂಮಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೂಡ ಸಿದ್ಧವಿದೆ ಎಂದು ಭರವಸೆ ನೀಡಿದರು.
ಶರಣರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸುವ ಸಂಬಂಧ ಹಿಂದಿನ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಪ್ರಸ್ತುತ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು, ಆದಷ್ಟು ಬೇಗ ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ನೇತೃತ್ವದಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವೆ ತಿಳಿಸಿದರು.