ಬಳ್ಳಾರಿ: ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸಂಯುಕ್ತಾಶ್ರಯದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಜನ ಜಾಗೃತಿ ಮೂಡಿಸುವ ಜಾಥಾಗೆ ಡಿಸಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಜಾಥಾಗೆ ಚಾಲನೆ ನೀಡಿ, ನಂತರ ಮಾತನಾಡಿದ ಅವರು, ಬಾಲ ಕಾರ್ಮಿಕ ಮಕ್ಕಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಖಡಕ್ ಸೂಚನೆ ನೀಡಿದರು.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಈ ಜಾಗೃತಿ ಜಾಥಾವು ಸಂಚರಿಸಲಿದೆ. ಫೆ.26 ರಿಂದ ಮಾ.13ರವರೆಗೆ ಜಿಲ್ಲೆಯಾದ್ಯಂತ ಆಟೋ ಮೂಲಕ ಪ್ರಚಾರ ಮಾಡುತ್ತಾ ಕರಪತ್ರ, ಭಿತ್ತಿಪತ್ರ ಹಂಚುವುದು ಹಾಗೂ ಸ್ಟಿಕರ್ಸ್ ಅಂಟಿಸುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಹೆಚ್.ಸಿ.ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಾಂದ್‍ಪಾಶಾ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಭೋಜರಾಜ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.