ಮೈಸೂರು: ಕಾವೇರಿ ಕಣಿವೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯಿಂದ ನಲುಗುತ್ತಿರುವ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮಕ್ಕೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ವರ್ಷ ಇದೇ ಭಾಗದಲ್ಲಿ ಪ್ರವಾಹ ಉಂಟಾಗಿತ್ತು. ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ನಂತರ ಪ್ರವಾಹ ತಗ್ಗಿದ ಬಳಿಕ ಮತ್ತೆ ಗ್ರಾಮಕ್ಕೆ ಕಳುಹಿಸಲಾಗಿತ್ತು. ಮಡಿಕೇರಿಗೆ ಹತ್ತಿರವಾಗಿರುವುದರಿಂದ ಕೊಪ್ಪ ಗ್ರಾಮ ಬೇಗನೆ ಪ್ರವಾಹ ಪೀಡಿತ ಪ್ರದೇಶವಾಗಲಿದೆ. ಹೀಗಾಗಿ, ಜಿಲ್ಲಾಧಿಕಾರಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿಇಓ ಪಿ.ಕೆ.ಮಿಶ್ರಾ ಅವರು ಸ್ಥಳ ಪರಿಶೀಲನೆ ನಡೆಸಿದರು. ಪ್ರವಾಹದ ಸ್ಥಿತಿಗತಿ ಅರಿತು ತ್ವರಿತವಾಗಿ ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸಲಹೆ ನೀಡಿದರು.