ಬೆಂಗಳೂರು: ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಶೋಕ ನಗರ ಪೊಲೀಸರು, ಕೊಲೆ ಯತ್ನ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಸ್ಮಶಾನದ ಬಳಿ ಆರೋಪಿ ವಿನೋದ್ ಅಲಿಯಾಸ್ ಪಚ್ಚೆ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ ಸ್ಪೆಕ್ಟರ್ ಶಶಿಧರ್ ನೇತೃತ್ವದ ತಂಡ ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸಿತು. ಆರೋಪಿ ವಿನೋದ್ಗೆ ಶರಣಾಗುವಂತೆ ಪೊಲೀಸರು ತಾಕೀತು ಮಾಡಿದಾಗ ಆತ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.
ಈ ವೇಳೆ ಆತ್ಮರಕ್ಷಣೆಗಾಗಿ ಇನ್ ಸ್ಪೆಕ್ಟರ್ ಶಶಿಧರ್ ಅವರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ನಂತರ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅಶೋಕನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ ವಿನೋದ್, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.