ಚಾಮರಾಜನಗರ: ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಂಡ್ಲುಪೇಟೆ 8 ನೇ ವಾರ್ಡ್ ಸದಸ್ಯ ಪಿ.ಶಶಿಧರ್ (ದೀಪು) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ 7 ನೇ ವಾರ್ಡ್ ಸದಸ್ಯರಾಗಿದ್ದರು. ಈ ಬಾರಿ ಕೈ ಟಿಕೆಟ್ ತಪ್ಪಿದ್ದರಿಂದ 8 ನೇ ವಾರ್ಡ್ ನಿಂದ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಗಣೇಶ್ ಪ್ರಸಾದ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಕಟ್ಟಾಳುವಾಗಿದ್ದರು. ಆದರೆ, ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳೆಯದಿಂದ ಅಂತರ ಕಾಯ್ದುಕೊಂಡಿದ್ದರು.
ಪುರಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು, ವಾರ್ಡ್ ನ ಅಭಿವೃದ್ಧಿಗಾಗಿ ಬಿಜೆಪಿಗೆ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಪಿ.ಶಶಿಧರ್ ತಿಳಿಸಿದ್ದಾರೆ.