ಬೆಂಗಳೂರು : ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಸ್ಥಿರ ಸರ್ಕಾರ ಇರಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರ ಆಡಳಿತ ಪಕ್ಷಕ್ಕೆ ಸಂಬಂಧಿಸಿರುವುದರಿಂದ ನಾವು ತಲೆ ಹಾಕುವುದಿಲ್ಲ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಡಳಿತ ಪಕ್ಷ ನಾಯಕತ್ವ ಬದಲಾವಣೆ ವಿಷಯಕ್ಕೂ, ನಮಗೂ ಸಂಬಂಧವಿಲ್ಲ. ಅದು ಆ ಪಕ್ಷದ ಆಂತರಿಕ ವಿಚಾರ ಎಂದಿದ್ದಾರೆ.
ಕೊರೊನಾ ಸೋಂಕಿನ ಸಮಸ್ಯೆ ರಾಜ್ಯದಲ್ಲಿ ತೀವ್ರವಾಗಿರುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯಂತಹ ರಾಜಕೀಯ ಬೆಳವಣಿಗೆಗಳು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಜನರು ಎದುರಿಸುತ್ತಿರುವ ಸಂಕಷ್ಟಕ್ಕಿಂತ ಅವರಿಗೆ ನಾಯಕತ್ವ ವಿಚಾರ ಮುಖ್ಯವಾಗಿರಬಹುದೋನೋ? ಆದರೆ, ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿ ಅಧಿಕಾರ ಹಂಚಿಕೊಳ್ಳುವ ವಿಚಾರ ಊಹಾಪೋಹದಿಂದ ಕೂಡಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ವೇದಿಕೆಯಲ್ಲಿ ಯಾವುದೇ ರೀತಿಯ ಚರ್ಚೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರ ಕೋವಿಡ್ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದ್ದು, ಭ್ರಷ್ಟಾಚಾರದ ಎಲ್ಲೆ ಮೀರಿದೆ. ರಾಜ್ಯದ ಜನರು ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದಿದ್ದಾರೆ.