ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆ ಹಾಗೂ ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟ ಸಿಬ್ಬಂದಿಯ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಬೀದರ್ನ ಸಾಮಾಜಿಕ ಕಾರ್ಯಕರ್ತ ಅಂಬರೀಷ್ ಎಸ್. ಕೆಂಚ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾ. ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಜೂ.21ಕ್ಕೆ ಮುಂದೂಡಿದೆ.
ಅರ್ಜಿದಾರರ ಕೋರಿಕೆ :
ರಾಜ್ಯದಲ್ಲಿ ಕೋವಿಡ್ ನಿರ್ಲಕ್ಷಿಸಿ ಚುನಾವಣೆ ನಡೆಸಿದ ಪರಿಣಾಮ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಹಲವು ಸಿಬ್ಬಂದಿ ಸೋಂಕಿಗೊಳಗಾಗಿ ಸಾವನ್ನಪ್ಪಿದ್ದಾರೆ. ಇವರ ಸಂಬಂಧಿಗಳಲ್ಲಿಯೂ ಕೆಲವರು ಸಾವನ್ನಪ್ಪಿದ್ದು, ಹಲವರ ಆರೋಗ್ಯ ಗಂಭೀರವಾಗಿದೆ. ಇದಕ್ಕೆ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯವೇ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕೊಲೆ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಮೃತ ಸಿಬ್ಬಂದಿಯ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ ಹಾಗೂ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕು. ಚುನಾವಣಾ ಸಿಬ್ಬಂದಿಯ ಕುಟುಂಬ ಸದಸ್ಯರು ಮೃತಪಟ್ಟಿದ್ದಲ್ಲಿ ಅವರಿಗೆ ತಲಾ 30 ಲಕ್ಷ ಪರಿಹಾರ ಹಾಗೂ ಸೋಂಕಿತರ ಸಂರ್ಪೂಣ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.