ಬೆಂಗಳೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಪ್ರತಿಪಕ್ಷ ಕಾಂಗ್ರೆಸ್ ನಾಯಕರು ನಾಳೆ ಚಾಮರಾಜನಗರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಬೆಳಗ್ಗೆ ಚಾಮರಾಜನಗರಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಪರಿಶೀಲನೆ ನಡೆಸಿ, ಮೃತರ ಕುಟುಂಬಕ್ಕೆ ಧೈರ್ಯ ತುಂಬಿ ಬರಲಿದ್ದಾರೆ.

ಇದೇ ಸಂದರ್ಭ ಜಿಲ್ಲಾ ನಾಯಕರ ಜತೆ ಸಭೆ ನಡೆಸಿ ಚರ್ಚಿಸಿ ಘಟನೆಗೆ ಕಾರಣ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಎಚ್ಚರಿಕೆಯ ಕುರಿತು ಮಾಹಿತಿ ಪಡೆಯಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗ್ಗೆ 7 ಗಂಟೆಗೆ ರಸ್ತೆ ಮಾರ್ಗವಾಗಿ ಚಾಮರಾಜನಗರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. 10.30ಕ್ಕೆ ತಲುಪಿ ಮಧ್ಯಾಹ್ನ 2 ಗಂಟೆಯವರೆಗೆ ಅಲ್ಲಿ ಸಭೆ ನಡೆಸಿ ಮರಳಲಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಚಾಮರಾಜನಗರಕ್ಕೆ ಪ್ರಯಾಣ ಬೆಳೆಸಲಿದ್ದು, ಸಭೆ ಮುಗಿಸಿ ಸಂಜೆ 4 ಗಂಟೆಗೆ ಅಲ್ಲಿಂದ ಹೊರಟು ಬೆಂಗಳೂರಿಗೆ ವಾಪಸಾಗಲಿದ್ದಾರೆ.